ಮತದಾರರ ಮಾಹಿತಿ ಕಳವು: ಚಿಲುಮೆ ವಿರುದ್ಧ ಬಿಬಿಎಂಪಿ ದೂರು

By Govindaraj S  |  First Published Nov 18, 2022, 12:00 PM IST

ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿರುದ್ಧ ಹಲಸೂರುಗೇಟ್‌ ಮತ್ತು ಕಾಡುಗೋಡಿ ಪೊಲೀಸ್‌ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿದೆ. 


ಬೆಂಗಳೂರು (ನ.18): ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿರುದ್ಧ ಹಲಸೂರುಗೇಟ್‌ ಮತ್ತು ಕಾಡುಗೋಡಿ ಪೊಲೀಸ್‌ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿದೆ. ಮತದಾರರ ಪಟ್ಟಿವಿಶೇಷ ಪರಿಷ್ಕರಣೆ 2023 ಕಾರ್ಯಚಟುವಟಿಕೆಗಳ ಕುರಿತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಶೈಕ್ಷಣಿಕ ಸಾಂಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಷರತ್ತುಬದ್ಧ ಅನುಮತಿಯನ್ನು ಬಿಬಿಎಂಪಿ ನೀಡಿತ್ತು.

ಈ ಸಂಸ್ಥೆಯ ವಿರುದ್ಧ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದಿದ್ದು ಷರತ್ತು ಉಲ್ಲಂಘಿಸಿರುವುದನ್ನು ಪರಿಗಣಿಸಿ ಅನುಮತಿ ಪತ್ರವನ್ನು ರದ್ದುಪಡಿಸಲಾಗಿದೆ. ಜೊತೆಗೆ ಈ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ಹಲಸೂರುಗೇಟ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Tap to resize

Latest Videos

70 ಸಾವಿರ ಕೋಟಿ ಎಲೆಕ್ಟ್ರಾನಿಕ್ಸ್‌ ಉತ್ಪನ್ನ ರಫ್ತು: ರಾಜೀವ್‌ ಚಂದ್ರಶೇಖರ್‌

ಚಿಲುಮೆ ಶೈಕ್ಷಣಿಕ, ಸಾಮಾಜಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಬಿಬಿಎಂಪಿ ವ್ಯಾಪ್ತಿಯ ಬಿಎಲ್‌ಓಗಳೊಂದಿಗೆ ಸಮನ್ವಯ ಸಾಧಿಸಿ ಹಲವು ಷರತ್ತುಗಳನ್ನು ಪಾಲಿಕೆ ವಿಧಿಸಿತ್ತು. ಮತದಾರರ ಪಟ್ಟಿಪರಿಷ್ಕರಣೆಯ ಜಾಗೃತಿ ಹಾಗೂ ಆಧಾರ್‌ ಸಂಖ್ಯೆಯನ್ನು ಲಿಂಕ್‌ ಮಾಡಲು ಬಿಎಲ್‌ಓ ಹಾಗೂ ಮತದಾರರ ನೋಂದಣಾಧಿಕಾರಿಗಳ ಸಹಯೋಗದೊಂದಿಗೆ ಕೆಲವು ಷರತ್ತುಗಳನ್ನು ವಿಧಿಸಿ ಅನುಮತಿ ನೀಡಲಾಗಿತ್ತು.

ಷರತ್ತುಗಳನ್ನು ಉಲ್ಲಂಘಿಸಿದ್ದರಿಂದ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿತ್ತು. ಆದರೂ ಸಂಸ್ಥೆ ಮತ್ತು ಸಂಸ್ಥೆಗೆ ಸೇರಿದ್ದ ಕೆ.ಎಂ.ಲೋಕೇಶ್‌ ಎಂಬುವವರು ಬಿಬಿಎಂಪಿಯಿಂದ ಯಾವುದೇ ಅನುಮತಿ ಪಡೆಯದೇ ಮತಗಟ್ಟೆಮಟ್ಟದ ಸಮನ್ವಯ ಅಧಿಕಾರಿ ಎಂಬ ಗುರುತಿನ ಚೀಟಿಯನ್ನು ಸೃಷ್ಟಿಸಿಕೊಂಡಿದ್ದರು. ಅಲ್ಲದೇ ನಾವು ಮತಗಟ್ಟೆಮಟ್ಟದ ಅಧಿಕಾರಿಗಳು ಎಂದು ಹೇಳಿಕೊಂಡು ನಕಲಿ ಮತಗಟ್ಟೆಮಟ್ಟದ ಅಧಿಕಾರಿಗಳ(ಬಿಎಲ್‌ಓ) ಗುರುತಿನ ಚೀಟಿಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ವ್ಯಕ್ತಿಯು ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸದೇ ನೇರವಾಗಿ ಮನೆ, ಮನೆಗೆ ಹೋಗಿ ಸಾರ್ವಜನಿಕರಿಂದ ಮತದಾರರ ಗುರುತಿನ ಚೀಟಿ ಹಾಗೂ ಆಧಾರ್‌ ಚೀಟಿಯನ್ನು ಸಂಗ್ರಹಿಸಿ ಅದನ್ನು ವೈಯಕ್ತಿಕವಾಗಿ ಯಾವುದೋ ಆ್ಯಪ್‌ ಸಿದ್ಧಪಡಿಸಿಕೊಂಡು ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ದೂರಿನಲ್ಲಿ ವಿವರಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದವರ ಮೀಸಲು ದೇಶದಲ್ಲಿ ಅಸಮಾನತೆ ಹೆಚ್ಚಿಸುತ್ತೆ: ಸಿದ್ದರಾಮಯ್ಯ

ತನಿಖೆಗೆ ತುಷಾರ್‌ ಆದೇಶ: ಮತದಾರರ ವೈಯಕ್ತಿ ಮಾಹಿತಿಯನ್ನು ಸಂಗ್ರಹಿಸುತ್ತಿರುವ ದೂರಿನ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ವಿಚಾರಣೆ ನಡೆಸಿ ವರದಿ ನೀಡುವಂತೆ ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಎಸ್‌.ರಂಗಪ್ಪ (ಬೆಂಗಳೂರು ಕೇಂದ್ರ), ಜಗದೀಶ್‌ ನಾಯಕ್‌ (ಬೆಂಗಳೂರು ದಕ್ಷಿಣ), ವೆಂಕಟಾಚಲಪತಿ(ಬೆಂಗಳೂರು ಉತ್ತರ) ಮತ್ತು ಶ್ರೀನಿವಾಸ್‌ (ಬೆಂಗಳೂರು ನಗರ) ಅವರಿಗೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೂಚನೆ ನೀಡಿದ್ದಾರೆ ಎಂದು ಬಿಬಿಎಂಪಿ ತಿಳಿಸಿದೆ.

click me!