ಬೆಂಗಳೂರು (ಸೆ.21): ಇತ್ತೀಚೆಗೆ ಚುನಾವಣೆ ನಡೆದ ಕಲಬುರಗಿ, ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಿಗೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಸಲು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಐದು ವರ್ಷಗಳ ಕಾಲ ಅಧಿಕಾರ ನಡೆಸುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಮೇಯರ್, ಉಪಮೇಯರ್ ಆಯ್ಕೆ ಹೆಚ್ಚಿನ ಸಮಸ್ಯೆಯಾಗುವುದಿಲ್ಲ.
ಕಲಬುರಗಿ ಮೇಯರ್ ಸ್ಥಾನ ನಮಗೆ ಕೊಡಪ್ಪ: ವಿಘ್ನ ನಿವಾರಣೆಗೆ ದಳಪತಿಗಳಿಂದ ಪೂಜೆ
ಆದರೆ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು ನಡೆಸಿದೆ. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನ ನಡೆಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಜೆಡಿಎಸ್ ಕದ ತಟ್ಟಿದೆ. ಆದರೆ, ಜೆಡಿಎಸ್ ಮಾತ್ರ ಕಾಂಗ್ರೆಸ್‌ನ ನಿಲುವಿನ ಮೇಲೆ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಪಾಲಿಕೆ ಚುನಾವಣೆಯ ಫಲಿತಾಂಶ ಬಂದು 15 ದಿನವಾದರೂ ಜೆಡಿಎಸ್ ಸ್ಪಷ್ಟನಿಲುವು ತಳೆಯುವಲ್ಲಿ ಇನ್ನೂ ಗೊಂದಲದಲ್ಲಿದೆ. ಇದೀಗ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಸಲು ಸರ್ಕಾರ ಮುಂದಾಗಿರುವುದರಿಂದ ಶೀಘ್ರದಲ್ಲಿಯೇ ಯಾರಿಗೆ ಬೆಂಬಲ ನೀಡಬೇಕು ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.
ಇನ್ನು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯೂ ಸಹ ಅತಂತ್ರವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಸ್ವತಂತ್ರ ಅಭ್ಯರ್ಥಿಗಳನ್ನು ನಂಬಿಕೊಂಡಿದೆ. ಕಾಂಗ್ರೆಸ್ ಸಹ ಅಧಿಕಾರ ಹಿಡಿಯಲು ಪ್ರಯತ್ನ ನಡೆಸುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಸಹ ಸ್ವತಂತ್ರ ಅಭ್ಯರ್ಥಿಗಳ ಬೆಂಬಲಕ್ಕಾಗಿ ಕಸರತ್ತು ನಡೆಸುತ್ತಿವೆ. ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಯುವುದರಿಂದ ಯಾರಿಗೆ ಅಧಿಕಾರ ಎಂಬುದು ಶೀಘ್ರದಲ್ಲಿಯೇ ಗೊತ್ತಾಗಲಿದೆ.