ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿ.ಎಸ್. ಯಡಿಯೂರಪ್ಪ ವಿಮಾನ ನಿಲ್ದಾಣವೆಂದು ನಾಮಕರಣ ಮಾಡುವುದಾಗಿ ಘೋಷಿಸಿದ್ದಾರೆ. ಈ ಕುರಿತು ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ.
ವರದಿ- ರಾಜೇಶ್ ಕಾಮತ್ ಏಷ್ಯಾನೆಟ್ ಸುವರ್ಣ ನ್ಯೂಸ್
ಶಿವಮೊಗ್ಗ (ಫೆ.09): ಮಲೆನಾಡ ಸೊಬಗಿನ ಶಿವಮೊಗ್ಗದಲ್ಲಿ ನಿರ್ಮಿಸಲಾದ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯದ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರಿಂದ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗ ತಾಲೂಕಿನ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ, ಎಟಿಸಿ ಕಟ್ಟಡ, ರನ್ ವೇ ಮೊದಲಾದವುಗಳ ಕಾಮಗಾರಿ ಪರಿಶೀಲನೆ ನಡೆಸಿದರು. ಸಂಸದ ಬಿ ವೈ ರಾಘವೇಂದ್ರ ರಿಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸಾಥ್ ನೀಡಿದರು.
Shivamogga: ಉಕ್ಕು ಕಾರ್ಖಾನೆ ಉಳಿಸಲು ಎಲ್ಲ ಪ್ರಯತ್ನ: ಸಿಎಂ ಬೊಮ್ಮಾಯಿ ಭರವಸೆ
ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ: ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಫೆ. 27 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಅಳಿದುಳಿದ ಕಾಮಗಾರಿಗಳನ್ನು ಪೂರೈಸಲು ಅಗತ್ಯ ಸೂಚನೆ ನೀಡಲಾಗಿದೆ. ಇನ್ನು ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿ.ಎಸ್. ಯಡಿಯೂರಪ್ಪ ವಿಮಾನ ನಿಲ್ದಾಣವೆಂದು ನಾಮಕರಣ ಮಾಡುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಈ ಕುರಿತು ರಾಜ್ಯ ಸರ್ಕಾರದಿಂದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರಧಾನಿ ಭೇಟಿ ಹಿನ್ನೆಲೆ ಅಧಿಕಾರಿಗಳಿಂದ ಪೂರ್ವಸಿದ್ಧತಾ ಸಭೆ: ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಯಿತು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಡಿಸಿ ಡಾ ಸೆಲ್ವ ಮಣಿ ಮಾತನಾಡಿ, ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ನನ್ನ ಮೇಲೆ ದಾಳಿಗಷ್ಟೆ ಇಡಿ ಇರೋದು: ಡಿ.ಕೆ.ಶಿವಕುಮಾರ್
ಜಿಲ್ಲೆಯ ರೈಲ್ವೇ ಯೋಜನೆಗಳಿಗೆ ಚಾಲನೆ: ಪ್ರಧಾನಿಯವರು ಜಿಲ್ಲೆಯ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಿದ್ದು, ಸಿರಿಧಾನ್ಯ ಮೇಳದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಸೂಕ್ತ ಟ್ರಾಫಿಕ್ ವ್ಯವಸ್ಥೆ, ಬೆಂಗಾವಲು ವಾಹನಗಳು, ಸುರಕ್ಷತಾ ಕ್ರಮಗಳು, ವೇದಿಕೆ, ಗ್ರೀನ್ ರೂಂ, ಅತಿಥಿ ಗಣ್ಯರಿಗೆ ವಾಸ್ತವ್ಯ ಮತ್ತು ಆತಿಥ್ಯ ವ್ಯವಸ್ಥೆ, ಇಂಟರ್‌ನೆಟ್ ಸಂಪರ್ಕ, ಸಿಸಿಟಿವಿ ಅಳವಡಿಕೆ, ನಿರಂತರ ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪ್ರತಿಯೊಂದು ಕಾರ್ಯದ ಮೇಲುಸ್ತುವಾರಿಗೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು ಎಂದರು.
ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಡಿ.ಪ್ರಕಾಶ್, ಮುಖ್ಯಮಂತ್ರಿ ಅವರ ವಿಶೇಷಾಧಿಕಾರಿ ರಾಜಪ್ಪ, ಎಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ, ಪಿಡಬ್ಲುಡಿ ಚೀಫ್ ಇಂಜಿನಿಯರ್ ಕಾಂತರಾಜು, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.