ಮಡಿಕೇರಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರಾಷ್ಟ್ರದ ದೊಡ್ಡ ಶಕ್ತಿ, ಎಲ್ಲರೂ ಆರಾಧಿಸುವ ಜ್ಞಾನಿ. ಆ ನಿಟ್ಟಿನಲ್ಲಿ ಡಾ. ಅಂಬೇಡ್ಕರ್ ಅವರ ಆದರ್ಶಗಳು ಪ್ರತಿಯೊಬ್ಬರ ಜೀವನಕ್ಕೆ ಮಾರ್ಗದರ್ಶಿ ಹಾಗೂ ದಾರಿದೀಪವಾಗಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದ್ದಾರೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದಲ್ಲಿಯೇ ಮಾದರಿ ಹಾಗೂ ಅತ್ಯಂತ ಶ್ರೇಷ್ಠ ಸಂವಿಧಾನನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಭಾರತದಂತಹ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ ಉಳಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಅವರು ಪ್ರತಿಪಾದಿಸಿದರು.
undefined
ಭಾರತದ ಸಂವಿಧಾನದ ಮೂಲಕ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಸಂವಿಧಾನ ನೀಡಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ. ಆ ನಿಟ್ಟಿನಲ್ಲಿ ವಿಶ್ವದಲ್ಲಿ 143 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ (Ambedkar) ಅವರ ಜನ್ಮ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ (Appachu Ranjan) ಮಾತನಾಡಿ, ಡಾ. ಅಂಬೇಡ್ಕರ್ ಅವರು ವಿಶ್ವಕ್ಕೆ ಮಾದರಿಯಾದ ಸಂವಿಧಾನ ನೀಡಿದ್ದಾರೆ. 18 ವರ್ಷ ಪೂರ್ಣಗೊಂಡ ಭಾರತೀಯ ಎಲ್ಲ ಪ್ರಜೆಗಳಿಗೂ ಮತದಾನ ಹಕ್ಕು ನೀಡುವ ಮೂಲಕ ಸಮಾನ ಅವಕಾಶ ಕಲ್ಪಿಸಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ (Veena Achaia) ಮಾತನಾಡಿ ಡಾ. ಅಂಬೇಡ್ಕರ್ ಅವರ ಚಿಂತನೆಗಳು, ಬರಹಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಸಂವಿಧಾನದ ಆಶಯವನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.
ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಚ್.ಆರ್. ಅರ್ಜುನ್ (Arjun) ಮಾತನಾಡಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಕಾವ್ಯ, ಕಥೆ, ಕವಿತೆಯಲ್ಲ, ಹಾಗೆಯೇ ಕಾಲ್ಪನಿಕ ದೃಷ್ಟಿಕೋನದಿಂದ ನೋಡುವುದಲ್ಲ, ಅವರೊಬ್ಬ ಜ್ಞಾನಿ, ವಾಸ್ತವದ ಪ್ರತಿನಿಧಿ ಹಾಗೂ ಆಧುನಿಕ ಭಾರತದ ಪಿತಾಮಹ ಎಂದು ಪ್ರತಿಪಾದಿಸಿದರು.
ವಿದ್ಯಾರ್ಥಿನಿ ಶ್ರೀಶಾ ಮಾತನಾಡಿ, ಸ್ವಾತಂತ್ರ್ಯಪೂರ್ವದಲ್ಲಿ ಅತಿ ಹೆಚ್ಚಿನ ಶಿಕ್ಷಣ ಪಡೆದವರು ಅಂಬೇಡ್ಕರ್ ಆಗಿದ್ದಾರೆ. ಅಮೆರಿಕದಲ್ಲಿ ಪಿಎಚ್.ಡಿ ಪದವಿ ಪಡೆದ ಮೊದಲ ಭಾರತೀಯ ಕೂಡ ಅಂಬೇಡ್ಕರ್ ಎಂದು ಹೇಳಿದರು.
ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಕೋವಿಡ್ ಸಂದರ್ಭದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಶ್ರುಶ್ರೂಷಕರು ಹಾಗೂ ಪೌರಕಾರ್ಮಿಕರನ್ನು ಗೌರವಿಸಲಾಯಿತು.
ಹಾಗೆಯೇ ಆದಿಜಾಂಬವ ಅಭಿವೃದ್ಧಿ ನಿಗಮ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮ ವತಿಯಿಂದ ಆಯ್ಕೆ ಆಗಿದ್ದ ಫಲಾನುಭವಿಗಳಿಗೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಮತ್ತು ವೀಣಾ ಅಚ್ಚಯ್ಯ ಅವರು ಪ್ರವಾಸಿ ಟ್ಯಾಕ್ಸಿ ನೀಡಿದರು.
ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ. ಜಿ.ಪಂ. ಸಿಇಒ ಭಂವರ್‌ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಡೇಗೌಡ, ಉಪ ವಿಭಾಗಧಿಕಾರಿ ಯತೀಶ್ ಉಲ್ಲಾಳ್, ತಹಸೀಲ್ದಾರ್ ಪಿ.ಎಸ್. ಮಹೇಶ್, ಪೌರಾಯುಕ್ತರಾದ ರಾಮದಾಸ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಮತ್ತಿತರರಿದ್ದರು.
ಗರಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಲೋಕೇಶ್ ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಸ್ವಾಗತಿಸಿದರು. ಕಾವ್ಯ ಪ್ರಾರ್ಥಿಸಿದರು. ಉಪನ್ಯಾಸಕರಾದ ಸತೀಶ್ ವಂದಿಸಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಒಳಗೊಂಡ ಸ್ತಬ್ಧಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಹಾಗೂ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಚಾಲನೆ ನೀಡಿದರು.