
ಕೊಡಗು (ಅ.21): ಮಡಿಕೇರಿ ದಸರಾ ಹಾಗೂ ಗೋಣಿಕೊಪ್ಪಲು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ನಾಳೆ ಕೊಡಗು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸೋಮಶೇಖರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಇಂದು ರಾತ್ರಿ ಮಡಿಕೇರಿ ಹಾಗೂ ಗೋಣಿಕೊಪ್ಪಲಿನಲ್ಲಿ ಐತಿಹಾಸಿಕ ದಸರಾ ಜನೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ಸಾವಿರಾರು ಜನರು ಈ ವೈಭವವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದು, ದಶಮಂಟಪಗಳ ಮೆರವಣಿಗೆ ರಾತ್ರಿಯಿಡೀ ಸಾಗಿ ಮುಂಜಾನೆಯವರೆಗೂ ಮುಂದುವರಿಯಲಿದೆ. ಈ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಾಳೆ ಮುಂಜಾನೆ ಖಾಸಗಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ದೂರದ ಊರುಗಳಿಂದ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಸಿಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬ ದೃಷ್ಟಿಯಿಂದ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ದಸರಾ ಮುಗಿದ ಬೆನ್ನಲ್ಲೇ ರಸ್ತೆಗಳಲ್ಲಿ ಜನದಟ್ಟಣೆ ಮತ್ತು ವಾಹನ ದಟ್ಟಣೆ ಹೆಚ್ಚಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ನೀಡುವುದು ಸೂಕ್ತ ಎಂದು ಜಿಲ್ಲಾಡಳಿತ ನಿರ್ಧರಿಸಿದೆ. ಜಿಲ್ಲಾಧಿಕಾರಿ ಸೋಮಶೇಖರ್ ಅವರು ಹೊರಡಿಸಿರುವ ಈ ಆದೇಶವು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅನ್ವಯವಾಗಲಿದೆ. ಈ ನಿರ್ಧಾರದಿಂದಾಗಿ ದಸರಾ ಹಬ್ಬದ ಸಂಭ್ರಮದಲ್ಲಿರುವ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ದೊಡ್ಡ ನಿರಾಳತೆ ಸಿಕ್ಕಂತಾಗಿದೆ.