ಮಾ.24ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

Kannadaprabha News   | Asianet News
Published : Feb 20, 2021, 10:12 AM ISTUpdated : Feb 20, 2021, 10:14 AM IST
ಮಾ.24ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಸಾರಾಂಶ

13ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದ ಲಾಂಛನ ಬಿಡುಗಡೆ ಮಾಡಿದ ಬಿಎಸ್‌ವೈ| ಭಾರತದ ಪ್ರತಿಷ್ಠಿತ ಚಿತ್ರೋತ್ಸವವಾಗಿ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಳೆದು ಬಂದಿದೆ| ಈಗಾಗಲೇ ದೇಶ-ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿದೆ| ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ ದೊರೆಯುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದ್ದು, ಇದು ಆಶಾದಾಯಕ ಬೆಳವಣಿಗೆ: ಸಿಎಂ| 

ಬೆಂಗಳೂರು(ಫೆ.20): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಂಘಟಿಸುತ್ತಿರುವ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾ.24 ರಿಂದ 31ರವರೆಗೆ ಏಳು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ.

ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಯಿತು. ಈ ಬಾರಿ ಭಾರತೀಯ ಪ್ರದರ್ಶನ ಕಲೆಗಳ ಮಹತ್ವ ವಿಷಯದ ಮೇಲೆ ಚಿತ್ರೋತ್ಸವವನ್ನು ಏರ್ಪಡಿಸಲು ನಿರ್ಣಯಿಸಲಾಯಿತು. ಇದೇ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ ಮಾಡಿದರು.

ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿಗಳು, ಭಾರತದ ಪ್ರತಿಷ್ಠಿತ ಚಿತ್ರೋತ್ಸವವಾಗಿ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಳೆದು ಬಂದಿದೆ. ಈಗಾಗಲೇ ದೇಶ-ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ ದೊರೆಯುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದ್ದು, ಇದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್‌ ಮಾತನಾಡಿ. ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಾಯನ್‌ ಮಾಲ್‌ನ ಪಿವಿಆರ್‌ ಚಿತ್ರಮಂದಿರದ 11 ಪರದೆಗಳಲ್ಲಿ ಒಟ್ಟಾರೆ 50ಕ್ಕೂ ಹೆಚ್ಚು ದೇಶಗಳ ಸುಮಾರು 200 ಅತ್ಯುತ್ತಮ ಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.

13ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ; ವಿಧಾನ ಸೌಧದಲ್ಲಿ ಸಭೆ!

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್‌ ಪುರಾಣಿಕ್‌ ಮಾತನಾಡಿ, ಬೆಂಗಳೂರು ನಗರದಲ್ಲಿ ಏಳು ದಿನಗಳ ಕಾಲ ನಡೆಯುವ ಚಲನಚಿತ್ರೋತ್ಸವದಲ್ಲಿ ಏಷಿಯನ್‌ ಸಿನಿಮಾ, ಚಿತ್ರಭಾರತಿ (ಭಾರತೀಯ ಸಿನಿಮಾ) ಹಾಗೂ ಕನ್ನಡ ಸಿನಿಮಾಗಳ ಸ್ಪರ್ಧಾ ವಿಭಾಗವಿರುತ್ತದೆ. ಅಲ್ಲದೆ, ವಿಶ್ವ ಸಿನಿಮಾ, ಸಿಂಹಾವಲೋಕನ, ಗ್ರ್ಯಾಂಡ್‌ ಕ್ಲಾಸಿಕ್‌, ಕೆಲವು ದೇಶಗಳ ವಿಶೇಷ ಸಿನಿಮಾ, ಅಗಲಿದ ವಿಶ್ವದ, ಭಾರತದ ಮತ್ತು ಕನ್ನಡ ಚಿತ್ರರಂಗದ ಗಣ್ಯರ ಸಂಸ್ಮರಣೆ, ಚಲನಚಿತ್ರ ವಿಮರ್ಶಕರ ಅಂತಾರಾಷ್ಟ್ರೀಯ ಒಕ್ಕೂಟದ ಪ್ರಶಸ್ತಿ ವಿಭಾಗ, ನೆಟ್‌ಪ್ಯಾಕ್‌, ಜೀವನಚರಿತ್ರೆ ಆಧರಿಸಿದ ಚಿತ್ರಗಳ ವಿಭಾಗಗಳು ವಿವಿಧ ದೃಷ್ಟಿಕೋನವನ್ನು ಬಿಂಬಿಸಲಿವೆ ಎಂದು ವಿವರಿಸಿದರು.

ಚಿತ್ರೋತ್ಸವದಲ್ಲಿ ಅತ್ಯುತ್ತಮ ಸಿನಿಮಾಗಳ ಪ್ರದರ್ಶನದ ಜೊತೆಗೆ ಚಿತ್ರರಂಗದ ನುರಿತ ದೇಶ-ವಿದೇಶಗಳ ನಿರ್ದೇಶಕರು, ಕಲಾವಿದರು, ತಂತ್ರಜ್ಞರೊಂದಿಗಿನ ಸಂವಾದ, ವಿಚಾರ ಸಂಕಿರಣ, ಚಿತ್ರಕಥೆ ರಚನೆ ಕಾರ್ಯಾಗಾರ, ಮಾಸ್ಟರ್‌ಕ್ಲಾಸ್‌ ಮೊದಲಾದ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಚಿತ್ರೋದ್ಯಮಿಗಳಿಗೆ, ವಿದ್ಯಾರ್ಥಿಗಳಿಗೆ ಮತ್ತು ಸಿನಿಮಾಸಕ್ತರಿಗೆ ಅನುಕೂಲವಾಗಲಿದೆ. ಕನ್ನಡ ಸಿನಿಮಾಗಳ ಸೃಜನಶೀಲ ಮುಖಗಳನ್ನು ವಿಶ್ವದ ನಾನಾ ದೇಶಗಳಿಗೆ ಪರಿಚಯಿಸುವ ಕೆಲಸವೂ ಈ ಮೂಲಕ ನಡೆಯುತ್ತಿದೆ ಎಂದರು.

ಸಭೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್‌.ಜೈರಾಜ್‌, ಹಿರಿಯ ಕಲಾವಿದರಾದ ಶೃತಿ, ತಾರಾ ಅನುರಾಧ, ಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಅಜುಂ ಪರ್ವೇಜ್‌, ಆಯುಕ್ತ ಪಿ.ಎಸ್‌.ಹರ್ಷ ಮತ್ತಿತರರು ಉಪಸ್ಥಿತರಿದ್ದರು.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
ಜಗಳದ ಕಾರಣದಿಂದ ನಾವು ದೂರವಾಗಲು ಬಯಸಲಿಲ್ಲ, ಜಗಳವನ್ನೇ ದೂರಮಾಡಲು ಬಯಸಿದ್ದೇವೆ; ಸೋನಾಕ್ಷಿ ಸಿನ್ಹಾ!