
ಮಡಿಕೇರಿ : ಅತಿವೃಷ್ಟಿಯಿಂದ ಕೊಡಗಿನಲ್ಲಿ 2000 ಕಿ.ಮೀ.ಗೂ ಅಧಿಕ ರಸ್ತೆಗೆ ಹಾನಿಯಾಗಿದೆ. ಈ ರಸ್ತೆಗಳನ್ನು ದುರಸ್ತಿ ಪಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತ್ವರಿತವಾಗಿ ಕ್ರಮಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೊಡಗಲ್ಲಿ 4,500 ಕಿ.ಮೀ ರಸ್ತೆಯಿದ್ದು, ಶೇ.10ರಷ್ಟುರಸ್ತೆಗಳು ದುರಸ್ತಿ ಮಾಡಲು ಸಾಧ್ಯವಿಲ್ಲ ಎಂಬ ಸ್ಥಿತಿಯಲ್ಲಿದೆ. ಮುಕ್ಕೋಡ್ಲು, ದೇವಸ್ತೂರು, ಗಾಳಿಬೀಡು ಸೇರಿದಂತೆ ವಿವಿಧೆಡೆ ಗ್ರಾಮೀಣ ರಸ್ತೆಗಳು ತೀರಾ ಹದಗೆಟ್ಟಿವೆ. ಇಲ್ಲಿ ಪರ್ಯಾಯ ಮಾರ್ಗವನ್ನೇ ಅವಲಂಬಿಸಬೇಕಿದೆ. ಸಂತ್ರಸ್ತರು ಇರುವ ಕಡೆ ರಸ್ತೆ ದುರಸ್ತಿ ಕಾರ್ಯ ಮಾಡಲೇಬೇಕಿದ್ದು, ಇದಕ್ಕೆ ಮೊದಲ ಆದ್ಯತೆ ನೀಡಲಾಗುವುದು. ನಂತರದ ದಿನದಲ್ಲಿ ಪರ್ಯಾಯ ಮಾರ್ಗದ ವ್ಯವಸ್ಥೆ ಕಡೆ ಗಮನ ಹರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 11.50 ಕೋಟಿ ರು. ಶಾಸಕರ ನಿಧಿಗೆ ಮೀಸಲಿಡಲಾಗಿದ್ದು, ಇದನ್ನು ಅಭಿವೃದ್ಧಿ ಕಾರ್ಯಕ್ಕೆ ಬಳಸಿಕೊಳ್ಳಬಹುದು. ಇದರೊಂದಿಗೆ ಎಸ್‌ಜಿಆರ್‌ಎಫ್‌ನಿಂದಲೂ 12 ಕೋಟಿ ರು. ಪಡೆದುಕೊಂಡು ರಸ್ತೆ ದುರಸ್ತಿಗೆ ಪ್ರಾಥಮಿಕ ಹಂತದಲ್ಲಿ ಕ್ರಮ ವಹಿಸಲಾಗುವುದು. ಮುಖ್ಯಮಂತ್ರಿ ಅನುದಾನ ನೀಡಿದ್ದು, ಇದರ ಸದ್ಬಳಕೆ ಮಾಡಿಕೊಂಡು ರಸ್ತೆಯ ಪುನರ್‌ನಿರ್ಮಾಣ ಕಾರ್ಯ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯೊಂದಿಗೆ ನೆರೆಯ ಮಂಗಳೂರು ಹಾಗೂ ಮೈಸೂರಿನಿಂದಲೂ ಹೆಚ್ಚುವರಿ ಸಿಬ್ಬಂದಿ ಕರೆಸಿಕೊಂಡು ಕೆಲಸ ನಿರ್ವಹಿಸಲಾಗುತ್ತದೆ. ಹಿರಿಯ ಅಧಿಕಾರಿಗಳಿಂದ ಸಲಹೆ ಪಡೆದುಕೊಂಡು ರಸ್ತೆ ದುರಸ್ತಿ ಮಾಡಲಾಗುವುದು ಎಂದರು. ಶಾಸಕ ಕೆ.ಜಿ ಬೋಪಯ್ಯ, ಜಿಲ್ಲಾಧಿಕಾರಿ ಶ್ರೀವಿದ್ಯಾ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.