
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಡಿ-ನೊಟಿಫೀಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿದೆ.
ಎಸಿಬಿಯ ನಿರ್ಧಾರದಿಂದಾಗಿ ಶಿವರಾಮ ಕಾರಂತ ಬಡಾವಣೆ ಡಿ-ನೊಟಿಫೀಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ತಾತ್ಕಾಲಿಕವಾಗಿ ನಿರಾಳರಾಗಿದ್ದ ಯಡಿಯೂರಪ್ಪ ಅವರಿಗೆ ಮತ್ತೆ ಕಾನೂನು ಸಂಕಷ್ಟ ಪ್ರಾರಂಭವಾಗುವ ಸಾಧ್ಯತೆ ಇದೆ.
ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಸಂಬಂಧ ಎಸಿಬಿ ಅಧಿಕಾರಿಗಳು ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಲಾರಂಭಿಸಿದ್ದಾರೆ. ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹಿಸಿ ಕೂಲಂಕಷವಾಗಿ ಚರ್ಚಿಸಿದ ಬಳಿಕ ಸುಪ್ರೀಂಕೋರ್ಟ್ ಮೊರೆ ಹೋಗುವ ಸಂಬಂಧ ಸರ್ಕಾರಕ್ಕೆ ಪತ್ರ ಬರೆಯಲಾಗುತ್ತದೆ ಎಂದು ಎಸಿಬಿ ಮೂಲಗಳು ಹೇಳಿವೆ.
ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡು ಈಗಾಗಲೇ ಒಂದು ಹಂತದ ತನಿಖೆ ಮಾಡಲಾಗಿದೆ. ತನಿಖಾ ಹಂತದಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ಕಾರಣ ಮುಂದಿನ ತನಿಖೆಗೆ ಸಮಸ್ಯೆಯಾಗಲಿದೆ. ಆರೋಪಿ ತರು ಪ್ರಭಾವಿ ವ್ಯಕ್ತಿಯಾಗಿದ್ದು, ರಾಜಕೀಯ ಪಕ್ಷವೊಂದರ ಅಧ್ಯಕ್ಷರಾಗಿದ್ದಾರೆ. ಸಾಕ್ಷಿಗಳಿಗೆ ಬೆದರಿಕೆ ಮತ್ತು ದಾಖಲಾತಿಗಳನ್ನು ನಾಶ ಮಾಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ ತಡೆಯಾಜ್ಞೆ ತೆರವುಗೊಳಿಸುವ ಯತ್ನ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಯಡಿಯೂರಪ್ಪ ವಿರುದ್ಧ ದೂರುದಾರ ಡಿ.ಅಯ್ಯಪ್ಪ ಅವರು 2017ರ ಜೂ.7ರಂದು ದೂರು ದಾಖಲಿಸಿದ್ದರು. ಹೈಕೋರ್ಟ್ ತಡೆ ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.