
ಕೊಪ್ಪಳ : ಹಿರಿಯ ಕಾಂಗ್ರೆಸ್ ಮುಖಂಡ, ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವುದರಲ್ಲಿ ತಪ್ಪೇನಿದೆ. ನಾನು ಸಹ ಅವರನ್ನು ಭೇಟಿಯಾಗಿ ಬಂದಿದ್ದೇನೆ. ಅದರಂತೆ ಖರ್ಗೆ ಅವರು ಭೇಟಿಯಾಗುತ್ತಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಪತ್ರಕರ್ತರು ಖರ್ಗೆ ಮತ್ತು ಸಿದ್ದರಾಮಯ್ಯ ಅವರ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ ಪರಮೇಶ್ವರ್ ಈ ರೀತಿಯಾಗಿ ಉತ್ತರಿಸಿದ್ದಾರೆ. ಭಿನ್ನಾಭಿಪ್ರಾಯಗಳು ಇರುವುದು ಸಹಜ. ಅಭಿಪ್ರಾಯ ಮಂಡನೆ ಮಾಡುವುದರಲ್ಲಿ ತಪ್ಪೇನೂ ಇಲ್ಲ. ಸಮ್ಮಿಶ್ರ ಸರ್ಕಾರ ಆಗಿರುವುದರಿಂದ ಅಭಿಪ್ರಾಯದಲ್ಲಿ ಒಂದಿಷ್ಟು ಬೇರೆ ಬೇರೆ ಇರುತ್ತವೆ. ಅದನ್ನು ಸರಿ ಪಡಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ. ಈ ಕುರಿತು ಯಾವುದೇ ಆತಂಕ ಬೇಡ. ಯಾರು ಏನೇ ಹೇಳಲಿ, ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ. ಯಾರೋ ಎಲ್ಲಿಯೋ ಹೇಳುತ್ತಾರೆ ಎಂದರೆ ಅದು ಅಪ್ರಸ್ತುತ. ಹೀಗಾಗಿ ಆ ಕುರಿತು ಮತ್ತೆ ಪ್ರಶ್ನೆ ಬೇಡ. ಸರ್ಕಾರ ಸುಭದ್ರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು. ಬಜೆಟ್ ಅಧಿವೇಶನಕ್ಕೆ ಸಚಿವ ಡಿ.ಕೆ.ಶಿವಕುಮಾರ್ ಗೈರು ಹಾಜರಾಗುವ ಬಗ್ಗೆ ಕೇಳಿದ ಪ್ರಶ್ನೆಗೆ ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.
ಸಂವಿಧಾನ ತಿದ್ದುಪಡಿಯಾಗಬಹುದು:
ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನ ಭಾರತದ ಸಂವಿಧಾನವಾಗಿದೆ. ಅದರ ರಕ್ಷಣೆ ನಮ್ಮೆಲ್ಲರ ಹೊಣೆ. ಇದರ ಜತೆಗೆ ಕಾಲಕ್ಕೆ ತಕ್ಕಂತೆ ಸಂವಿಧಾವನ್ನು ತಿದ್ದುಪಡಿ ಮಾಡಲಾಗಿದೆ. ಈಗಾಗಲೇ ನೂರಕ್ಕೂ ಅಧಿಕ ಬಾರಿ ತಿದ್ದುಪಡಿ ಮಾಡಲಾಗಿದ್ದು, ಮುಂದೆಯೂ ತಿದ್ದುಪಡಿಯಾಗಬಹುದು ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.
ಸೈಬರ್ ಕ್ರೈಂಗಳ ತಡೆಗೆ ಪೊಲೀಸ್ ಇಲಾಖೆ ಸಿದ್ಧ: ತಂತ್ರಜ್ಞಾನ ಅಭಿವೃದ್ಧಿಗೊಂಡಂತೆ ಹೊಸದಾಗಿ ಸಾಮಾಜಿಕ ಸಮಸ್ಯೆಗಳು ಕಂಡುಬರುತ್ತಿವೆ. ಈ ಪೈಕಿ ಕಂಪ್ಯೂಟರ್ ಹಾಗೂ ಅಂತರ್ಜಾಲ ತಂತ್ರಜ್ಞಾನ ಬಳಸಿಕೊಂಡು ನಡೆಸುತ್ತಿರುವ ಸೈಬರ್ ಕ್ರೈಂ ಕೂಡ ಸಾಮಾಜಿಕ ಸಮಸ್ಯೆಯಾಗಿ ಉಲ್ಬಣಗೊಳ್ಳುತ್ತಿದೆ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿಯನ್ನು ಸನ್ನದ್ಧಗೊಳಿಸುತ್ತಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.