
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿಚಾರವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೆಗಲಿಗೆ ವಹಿಸಿದ್ದಾರೆ.
ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡುವ ಸಂಬಂಧ ಚರ್ಚಿಸಲು ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಪದ್ಮನಾಭನಗರದಲ್ಲಿನ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದರು.
ಈ ವೇಳೆ ಬಿಬಿಎಂಪಿ ಮೈತ್ರಿ ಸಂಬಂಧ ಮಾತುಕತೆ ನಡೆಸಿದರು. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ವಿಷಯವನ್ನು ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ವಹಿಸಲಾಗಿದೆ ಎಂದು ದೇವೇಗೌಡ ಅವರು ಸ್ಪಷ್ಟವಾಗಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಬಿಎಂಪಿ ಮೈತ್ರಿ ವಿಚಾರವಾಗಿ ಗೃಹಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮನ್ನು ಭೇಟಿ ಮಾಡಿದ್ದರು. ಮೈತ್ರಿ ವಿಷಯದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಜವಾಬ್ದಾರಿಯನ್ನು ಕುಮಾರಸ್ವಾಮಿ ಅವರಿಗೆ ವಹಿಸಲಾಗಿದೆ.
ಹೀಗಾಗಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸುವಂತೆ ತಿಳಿಸಿದ್ದೇನೆ. ಸೆ.28ರಂದು ಬಿಬಿಎಂಪಿ ಮೇಯರ್, ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಕುಮಾರಸ್ವಾಮಿ ಅವರು ಪಕ್ಷದ ಮುಖಂಡರು ಮತ್ತು ಬಿಬಿಎಂಪಿ ಸದಸ್ಯರ ಜತೆ ಮಾತುಕತೆ ನಡೆಸಿದ್ದಾರೆ. ಮತ್ತೊಮ್ಮೆ ಮಾತುಕತೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಕುಮಾರಸ್ವಾಮಿ ಮಾತನಾಡಿ, ರಾಮಲಿಂಗಾರೆಡ್ಡಿ ಮತ್ತು ದೇವೇಗೌಡ ಅವರು ಚರ್ಚಿಸಿರುವ ಬಗ್ಗೆ ಮಾಹಿತಿ ಇಲ್ಲ. ಆದರೆ, ಏನು ಮಾತನಾಡಿದ್ದಾರೆ ಎಂಬುದರ ಬಗ್ಗೆ ತಿಳಿದುಕೊಳ್ಳುತ್ತೇನೆ. ಬಳಿಕ ಸಂಸದ ಕುಪ್ಪೇಂದ್ರ ರೆಡ್ಡಿ ಸೇರಿದಂತೆ ಪಕ್ಷದ ಮುಖಂಡರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.