
ಬೆಂಗಳೂರು (ಜೂ.13) : ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಸಮಾಧಾನದ ಹಿನ್ನೆಲೆಯಲ್ಲಿ ಎಲಿವೇಟೆಡ್ ಕಾರಿಡಾರ್ ಯೋಜನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಆದರೆ, ಇದನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಾಗಲಿ ಅಥವಾ ಯೋಜನೆಯನ್ನು ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮದ (ಕೆಆರ್‌ಡಿಸಿಎಲ್) ಅಧಿಕಾರಿಗಳಾಗಲಿ ಖಚಿತಪಡಿಸಿಲ್ಲ. ಅಂತಹ ಯಾವುದೇ ಸೂಚನೆ ನಮಗೆ ಬಂದಿಲ್ಲ ಎಂದು ಹೇಳುತ್ತಿದ್ದಾರೆ.
ಮಹತ್ವಾಕಾಂಕ್ಷಿ 102 ಕಿ.ಮೀ. ಉದ್ದದ ಎಲಿವೇಟೆಡ್ ಕಾರಿಡಾರ್ ಯೋಜನೆ ಬರುವುದು ಬೆಂಗಳೂರು ವ್ಯಾಪ್ತಿಯಲ್ಲಿ. ಹಾಗಾಗಿ ಈ ಯೋಜನೆಯನ್ನು ಬೆಂಗಳೂರು ಅಭಿವೃದ್ಧಿ ಇಲಾಖೆ ಅಡಿಯಲ್ಲಿರುವ ಬಿಡಿಎ ಅಥವಾ ಬಿಬಿಎಂಪಿ ಮೂಲಕ ಕೈಗೊಳ್ಳಬೇಕಿತ್ತು. ಅದರ ಬದಲು ಲೋಕೋಪಯೋಗಿ ಇಲಾಖೆಯಿಂದ ನೇರವಾಗಿ ಕೈಗೊಳ್ಳಲಾಗುತ್ತಿದೆ. ಕನಿಷ್ಠ ಪಕ್ಷ ಸೌಜನ್ಯಕ್ಕೂ ಈ ಯೋಜನೆಗೆ ನನ್ನ ಸಹಮತ ಪಡೆಯಲಾಗಿಲ್ಲ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಪರಿಶೀಲನಾ ಸಭೆಯಲ್ಲಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು. ಇದೇ ವೇಳೆ ಲೋಕೋಪಯೋಗಿ ಇಲಾಖೆ ಕಾರ್ಯವೈಖರಿ ಬಗ್ಗೆ ಇಲಾಖೆಯ ಸಚಿವ ಎಚ್.ಡಿ.ರೇವಣ್ಣ ಅವರೊಂದಿಗೆ ವಾಗ್ವಾದವೂ ನಡೆದಿತ್ತು.
ಈ ಕಾರಣದಿಂದ ಮುಖ್ಯಮಂತ್ರಿ ಅವರು ಉಪಮುಖ್ಯಮಂತ್ರಿ ಅವರನ್ನೂ ಒಳಗೊಂಡಂತೆ ಒಂದು ಸಭೆ ಆಯೋಜಿಸಿ ಎಲಿವೇಟೆಡ್ ಕಾರಿಡಾರ್ ಕುರಿತು ಅವರಿಂದಲೂ ಸಲಹೆ, ಸೂಚನೆ ಪಡೆಯೋಣ ಎಂದು ಹೇಳಿದ್ದರು. ಆದರೆ, ಯೋಜನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಯಾವುದೇ ಸೂಚನೆ ನೀಡಿಲ್ಲ ಎನ್ನುತ್ತಾರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು.
ಎಲಿವೇಟೆಡ್ ಕಾರಿಡಾರ್ ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿಗಳಿಂದಾಗಲಿ ಅಥವಾ ಸಚಿವರಿಂದಾಗಲಿ ಯಾವುದೇ ಸೂಚನೆ ಬಂದಿಲ್ಲ. ಯೋಜನೆ ಮುಂದುವರಿಯಲಿದೆ.
-ಕೃಷ್ಣಾ ರೆಡ್ಡಿ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.