ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ : ಬಿಎಸ್ ವೈ

By Web DeskFirst Published Sep 7, 2018, 12:16 PM IST
Highlights

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ತಮ್ಮ ಪುತ್ರ ಭೇಟಿ ಮಾಡಿದ್ದಾರೆ ಎನ್ನುವ ಆರೋಪ ಸಾಬೀತು ಮಾಡಿದಲ್ಲಿ ತಾವು ರಾಜಕೀಯ ನಿವೃತ್ತಿ ಪಡೆಯುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. 

ಬೆಂಗಳೂರು: ನನ್ನ ಪುತ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿದ್ದಾನೆ ಎಂಬ ಆರೋಪವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲೂ ಚಿಂತನೆ ನಡೆಸುತ್ತೇನೆ ಎಂದಿದ್ದಾರೆ. 

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಈ ಆರೋಪಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ರಾಜ್ಯದ ಜನರ ಮುಂದೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಕುಮಾರಸ್ವಾಮಿ ಅವರು ಆಧಾರರಹಿತವಾಗಿ ನನ್ನ ಮತ್ತು ನನ್ನ ಮಗನ ಮೇಲೆ ಆರೋಪ ಮಾಡಿರುವುದು ಸರಿಯಲ್ಲ. ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡು ಈ ರೀತಿಯ ಹೇಳಿಕೆ ನೀಡಿರುವುದು ಅಕ್ಷಮ್ಯ ಅಪರಾಧ ಎಂದು  ಕಿಡಿಕಾರಿದರು. 

ಆಧಾರರಹಿತವಾಗಿ ಸರ್ಕಾರವನ್ನು ಬೀಳಿಸುವ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂಬುದಾಗಿ ಸಿಎಂ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಈ  ಸಂಬಂಧ ತೆರಿಗೆ ಇಲಾಖೆ ಅಧಿಕಾರಿಗಳು ಯಾವುದೇ ರೀತಿಯಲ್ಲಿ ಯಾವೊಬ್ಬ ವ್ಯಕ್ತಿ ಕೂಡ ನಮ್ಮನ್ನು ಸಂಪರ್ಕಿಸಿಲ್ಲ ಎಂಬ ಸ್ಪಷ್ಟನೆಯನ್ನು ಅಧಿಕೃತವಾಗಿ ನೀಡಿದ್ದಾರೆ. 

ಹೀಗಾಗಿ, ಮುಖ್ಯಮಂತ್ರಿಗಳ ಹೇಳಿಕೆ ಸತ್ಯಕ್ಕೆ ದೂರವಾಗಿದೆ.  24 ಗಂಟೆಯೊಳಗಾಗಿ ಮುಖ್ಯಮಂತ್ರಿಗಳು ರಾಜ್ಯದ  ಜನರ ಮುಂದೆ ಕ್ಷಮೆಯಾಚಿಸಬೇಕು. ಒಂದು ವೇಳೆ ಕುಮಾರಸ್ವಾಮಿ ತಮ್ಮ ಹೇಳಿಕೆಯನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ. 

click me!