
ಬಳ್ಳಾರಿ : ‘ರಾಜ್ಯ ರಾಜಕೀಯದಲ್ಲಿ ಏನಾದರೂ ಏರುಪೇರಾಗಬಹುದು ಕಾದು ನೋಡಿ’ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರುವ ಸುಳಿವು ನೀಡಿದ್ದಾರೆ.
ಇಲ್ಲಿನ ಬಸವ ಭವನದಲ್ಲಿ ಪಕ್ಷದ ಕಾರ್ಯಕರ್ತರ ಬಹಿರಂಗ ಸಭೆಯಲ್ಲಿ ಶನಿವಾರ ಮಾತನಾಡಿದ ಅವರು, ರಾಜ್ಯದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜೆಡಿಎಸ್ ನೇತೃತ್ವದ ರಾಜ್ಯ ಸರ್ಕಾರ ವೈಫಲ್ಯಗಳ ವಿರುದ್ಧ ಚಳವಳಿ ರೂಪಿಸುವ ಮೂಲಕ ಆಡಳಿತಾರೂಢ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿ. ಮುಖ್ಯಮಂತ್ರಿಯೇ ಅಧಿಕಾರ ಬಿಟ್ಟು ತೊಲಗುವಂತೆ ಸರ್ಕಾರದ ಪ್ರತಿಹೆಜ್ಜೆಯ ಮೇಲೆ ಕಣ್ಣಿಟ್ಟು ಕೆಲಸ ಮಾಡಿ. ಇಲ್ಲದಿದ್ದರೆ ರಾಜ್ಯದ ಜನತೆಗೆ ನಾವು ಅನ್ಯಾಯ ಮಾಡಿದಂತಾಗುತ್ತದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಜೆಡಿಎಸ್ ಬರೀ 37 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದೆ. ಅತಿ ಹೆಚ್ಚು ಸ್ಥಾನಗಳನ್ನು ಪಡೆದ ಬಿಜೆಪಿ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುವಂತಾಗಿದೆ. ಚುನಾವಣೆ ಮುನ್ನ 3 ತಿಂಗಳು ಹಾಗೂ ಸರ್ಕಾರ ರಚನೆಯಾದ 3 ತಿಂಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸಗಳಾಗಿಲ್ಲ. ಈ ಅನಿಷ್ಟಸರ್ಕಾರ ಯಾವಾಗ ತೊಲಗುತ್ತದೆ ಎಂದು ಜನರು ಬೇಸರಗೊಂಡಿದ್ದಾರೆ. ಅಷ್ಟರ ಮಟ್ಟಿಗೆ ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಜನವಿರೋಧಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.