
ಬೆಂಗಳೂರು(ಡಿ.26): ಮಹದಾಯಿ ನದಿ ನೀರು ಹಂಚಿಕೆ ವಿಷಯದಲ್ಲಿ ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಅಹೋರಾತ್ರಿ ಧರಣಿ ನಡೆಸುತ್ತಿರುವ ಮಹದಾಯಿ ಹೋರಾಟಗಾರರ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಮಂಗಳವಾರ ರಾಜ್ಯ ರಾಜಧಾನಿಗೆ ಆಗಮಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸುವರೇ ಎಂಬುದು ಕುತೂಹಲಕರವಾಗಿದೆ.
ಪರಿವರ್ತನಾ ರ್ಯಾಲಿಯಲ್ಲಿ ತೊಡಗಿರುವ ಯಡಿಯೂರಪ್ಪ ದಾವಣಗೆರೆಯಲ್ಲಿನ ಯಾತ್ರೆ ಮುಗಿಸಿ ಮಂಗಳವಾರ ನಗರಕ್ಕೆ ಆಗಮಿಸಲಿದ್ದಾರೆ. ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸಭೆಯಲ್ಲಿ ಭಾಗವಹಿಸಲು ನಗರಕ್ಕೆ ಬಂದ ಬಳಿಕ ಮಹದಾಯಿ ಹೋರಾಟಗಾರರನ್ನು ಭೇಟಿ ಮಾಡಿ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆಯಾದರೂ ಖಚಿತವಾಗಿಲ್ಲ.
ಮಹದಾಯಿ ನದಿ ನೀರು ಕುಡಿಯಲು ಬಿಡುವ ಸಂಬಂಧ ಪಕ್ಷದ ನಿಲುವೇನು ಎಂಬುದರ ಬಗ್ಗೆ ಯಡಿಯೂರಪ್ಪ ಸ್ಪಷ್ಟನೆ ನೀಡಬೇಕು ಎಂದು ಶನಿವಾರ ಬೆಂಗಳೂರಿಗೆ ಆಗಮಿಸಿದ್ದ ನೂರಾರು ಮಹದಾಯಿ ಹೋರಾಟಗಾರರು ಬಿಜೆಪಿ ಕಚೇರಿಯ ಮುಂದೆ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಕೊರೆಯುವ ಚಳಿಯಲ್ಲಿ ರೈತರು ರಾತ್ರಿಯಿಡೀ ರಸ್ತೆಯಲ್ಲೇ ವಾಸ್ತವ್ಯ ಮಾಡುತ್ತಿದ್ದು, ಯಡಿಯೂರಪ್ಪ ಖುದ್ದು ಭೇಟಿ ನೀಡಿ ಮನವಿ ಸ್ವೀಕರಿಸುವವರೆಗೆ ಧರಣಿ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಇದನ್ನು ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಜೆಡಿಎಸ್ ತಮ್ಮ ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ. ಅಲ್ಲದೇ, ಈ ಪ್ರಕರಣ ಬಿಜೆಪಿಗೆ ಮುಜುಗರ ಉಂಟುಮಾಡಿದೆ. ಇದರಿಂದ ತಪ್ಪಿಸಿಕೊಳ್ಳಲು ಯಡಿಯೂರಪ್ಪ ಅವರು ರೈತರನ್ನು ಭೇಟಿ ಮಾಡಿ ಮನವೊಲಿಕೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಕಳೆದ ಎರಡು ವರ್ಷಗಳಿಂದ ನಾವು ಪ್ರತಿಭಟನೆ ನಡೆಸುತ್ತಿದ್ದು, ಮಹದಾಯಿ ಯೋಜನೆ ಜಾರಿಗೆ ಒತ್ತಾಯ ಮಾಡಲಾಗುತ್ತಿದೆ. ಆದರೆ, ಜನಪ್ರತಿನಿಧಿಗಳು ಕಿವುಡರಂತೆ ವರ್ತಿಸುತ್ತಿದ್ದಾರೆ. ನೀರಿಗಾಗಿ ನಮ್ಮ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸುತ್ತೇವೆ ಎಂದು ಧರಣಿ ನಿರತರು ಸ್ಪಷ್ಟವಾಗಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.