
ಬೆಂಗಳೂರು (ಜು. 24): ಆಷಾಢ ಮಾಸ ಮುಗಿದ ಬಳಿಕವೇ ಸಚಿವ ಸಂಪುಟ, ನಿಗಮ ಮಂಡಳಿ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕ ಒಟ್ಟೊಟ್ಟಿಗೆ ನಡೆಯಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಹುಲ್ ಭೇಟಿಯ ಸಂದರ್ಭದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆ ಸಂಬಂಧಿಸಿ ಮಾತುಕತೆ ನಡೆಸಿದ್ದೇನೆ. ಮೈತ್ರಿ ಪಕ್ಷಗಳೊಂದಿಗೆ ಸೇರಿ ಕಾಂಗ್ರೆಸ್ ಚುನಾವಣೆ ಎದುರಿಸುವ ರಾಹುಲ್ ತೀರ್ಮಾನವನ್ನು
ಬೆಂಬಲಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸದ್ಯ 30 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ನಡೆಯುವ ಸಾಧ್ಯತೆಯಿದೆ. ಇದರಲ್ಲಿ 20 ಸ್ಥಾನಗಳು ಕಾಂಗ್ರೆಸ್ ಪಕ್ಷಕ್ಕೆ ಸಿಗಲಿದ್ದು ಉಳಿದ 10 ಸ್ಥಾನಗಳು ಜೆಡಿಎಸ್ ಪಾಲಾಗಲಿವೆ. ನಿಗಮ ಮಂಡಳಿ ನೇಮಕದ ಸಂದರ್ಭದಲ್ಲಿ ಹಿರಿಯ ಶಾಸಕರಿಗೆ ಆದ್ಯತೆ ನೀಡುವ ಸುಳಿವನ್ನು ಸಿದ್ದರಾಮಯ್ಯ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ನೇಮಕವನ್ನು ಕುಮಾರಸ್ವಾಮಿ ಅವರೇ ನಡೆಸಲಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸಲಾಗುವುದು. ಈ ಬಗ್ಗೆ ಪಕ್ಷದ ಯಾವುದೇ ನಾಯಕರ ವಿರೋಧವಿಲ್ಲ. ಆದರೆ ಸೀಟು ಹಂಚಿಕೆಯ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಸೀಟು ಹಂಚಿಕೆಯ ಬಗ್ಗೆ ಹೈಕಮಾಂಡ್ ಮಟ್ಟದಲ್ಲೇ ತೀರ್ಮಾನವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರ ಭೇಟಿಯ ಸಂದರ್ಭದಲ್ಲಿ ತಾವು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.