
ನವದೆಹಲಿ: ಕಾವೇರಿ ನಿರ್ವಹಣಾ ಮಂಡಳಿ ರಚನೆ ಬಿಕ್ಕಟ್ಟು ಪರಿಹರಿಸಲು ನೀರು ಬಿಡುಗಡೆ ಉಸ್ತುವಾರಿ ತಾನೇ ವಹಿಸುವ ಪ್ರಾಧಿಕಾರವೊಂದನ್ನು ರಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಹೊಸ ಬಿಕ್ಕಟ್ಟಿಗೆ ಕಾರಣವಾಗುತ್ತಿರುವ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಪರಿಹಾರ ಕಂಡುಕೊಳ್ಳುವ ಯತ್ನವನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಕೇಂದ್ರ ಸರ್ಕಾರವೇ ನಿರ್ವಹಿಸುವ ಪ್ರಾಧಿಕಾರವೊಂದನ್ನು ಸ್ಥಾಪಿಸಿ ಕಾವೇರಿ ನೀರು ಬಿಡುಗಡೆಯ ಮೇಲುಸ್ತುವಾರಿ ವಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಈ ಸಂಬಂಧ ಕರಡು ಸಂಪುಟ ಟಿಪ್ಪಣಿಯನ್ನು ಕೇಂದ್ರ ಜಲಸಂಪನ್ಮೂಲ ಸಚಿವಾಲಯ ಸಿದ್ಧಪಡಿಸಿದೆ. ಇದನ್ನು ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟಕ್ಕೆ ರವಾನಿಸುವ ನಿರೀಕ್ಷೆಯಿದೆ. ಆದರೆ ಇದಕ್ಕೆ ಕಾವೇರಿ ನಿರ್ವಹಣಾ ಮಂಡಳಿ ಎಂದೇನೂ ಟಿಪ್ಪಣಿಯಲ್ಲಿ ಹೆಸರಿಸಲಾಗಿಲ್ಲ. ಕೇಂದ್ರ ಸರ್ಕಾರಕ್ಕೆ ಕಾವೇರಿ ನೀರು ಬಿಡುಗಡೆ ನೋಡಿಕೊಳ್ಳಲು ಒಂದು ಪ್ರಾಧಿಕಾರ ರಚಿಸದೇ ಬೇರೆ ವಿಧಿಯಿಲ್ಲ ಎಂದು ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ ಎಂದು ‘ಹಿಂದುಸ್ತಾನ್ ಟೈಮ್ಸ್’ ಪತ್ರಿಕೆ ಶನಿವಾರ ವರದಿ ಮಾಡಿದೆ.
ಆದರೆ ಇದು ಯಾವಾಗ ಸ್ಥಾಪನೆಯಾಗಲಿದೆ ಎಂಬ ಬಗ್ಗೆ ಈಗಲೇ ಹೇಳಲಾಗದು. ಮಾರ್ಚ್ 26ರೊಳಗೆ ಕಾವೇರಿ ನದಿ ನಿರ್ವಹಣೆಗೆ ‘ಸ್ಕೀಮ್’ ರಚನೆಯಾಗಬೇಕು ಎಂಬ ಸುಪ್ರೀಂ ಕೋರ್ಟ್‌ನ ಗಡುವಿನೊಳಗೆ ರಚನೆ ಆಗದೇ ಹೋಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.