ಕೆಎಸ್ಸಾರ್ಟಿಸಿಯಿಂದ ಭರ್ಜರಿ ಗುಡ್ ನ್ಯೂಸ್

By Web DeskFirst Published Dec 20, 2018, 11:33 AM IST
Highlights

ಕ್ರಿಸ್ ಮಸ್ ಸಂದರ್ಭದಲ್ಲಿ ರಜೆಯ ಕಾರಣ ತಮ್ಮ ತಮ್ಮ ಊರುಗಳಿಗೆ ರಾಜಧಾನಿಯಿಂದ ತೆರಳುವವರ ಸಂಖ್ಯೆ ಹೆಚ್ಚಳವಾಗುವ ನಿಟ್ಟಿನಲ್ಲಿ ಕೆ ಎಸ್ ಆರ್ ಟಿಸಿಯಿಂದ ಹೆಚ್ಚುವರಿ ಬಸ್ ಸೇವೆ ಒದಗಿಸಲಾಗುತ್ತಿದೆ. 

ಬೆಂಗಳೂರು :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಸಾರ್ಟಿಸಿ) ಕ್ರಿಸ್‌ಮಸ್‌ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರಯಾಣದ ಅನುಕೂಲಕ್ಕಾಗಿ ಡಿ.21 ಮತ್ತು 22ರಂದು ಬೆಂಗಳೂರು ನಗರದಿಂದ ರಾಜ್ಯ ಮತ್ತು ಹೊರರಾಜ್ಯಗಳ ವಿವಿಧೆಡೆಗೆ 550 ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಮೊದಲಾದ ಸ್ಥಳಗಳಿಗೆ ಮತ್ತು ಮೈಸೂರು ರಸ್ತೆಯ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹೆಚ್ಚುವರಿ ಬಸ್‌ಗಳು ಹೊರಡಲಿವೆ.

ಶಾಂತಿನಗರದ ಕೆಎಸ್ಸಾರ್ಟಿಸಿ ಕೇಂದ್ರ ಘಟಕ 2 ಮತ್ತು 4 ಮುಂಭಾಗದಿಂದ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್‌ ಮೊದಲಾದ ನಗರಗಳಿಗೆ ಬಸ್‌ ಕಾರ್ಯಾಚರಣೆ ಮಾಡಲಾಗುವುದು. ಅಂತೆಯೇ ಪೀಣ್ಯದ ಬಸವೇಶ್ವರ ಬಸ್‌ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್‌ ಭೀಮಾನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರ ಮೊದಲಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡಲಾಗುವುದು.

ನಂತರ ರಾಜ್ಯ ಹಾಗೂ ಹೊರರಾಜ್ಯಗಳ ವಿವಿಧೆಡೆಯಿಂದ ನಗರಕ್ಕೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಡಿ.25ರಂದು ಹೆಚ್ಚುವರಿ ಬಸ್‌ ಕಾರ್ಯಾಚರಣೆಗೊಳಿಸಲಾಗುವುದು. ಸಾರ್ವಜನಿಕರು ಈ ಹೆಚ್ಚುವರಿ ಬಸ್‌ ಸೌಲಭ್ಯ ಪಡೆದುಕೊಳ್ಳುವಂತೆ ಕೆಎಸ್ಸಾರ್ಟಿಸಿ ಮನವಿ ಮಾಡಿದೆ.

2 ದಿನ ದೇಶದಾದ್ಯಂತ ಮುಷ್ಕರಕ್ಕೆ ಕರೆ : ಯಾವ ಸೇವೆ ವ್ಯತ್ಯಯ?
click me!