
ಬೆಂಗಳೂರು : ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ರಾಜಕೀಯ ಬೆಳವಣಿಗೆಯಲ್ಲಿ ಮತ್ತು ಸರ್ಕಾರ ರಚನೆಯಲ್ಲಿ ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರಂತರ ಓಡಾಟದಿಂದ ದಣಿದಿರುವ ಹಿನ್ನೆಲೆಯಲ್ಲಿ ಶನಿವಾರ ವಿಶ್ರಾಂತಿಯ ಮೊರೆ ಹೋಗಲಿದ್ದು, ಭಾನುವಾರ ದೆಹಲಿಗೆ ತೆರಳುವ ಸಾಧ್ಯತೆಯಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಉದ್ಭವವಾದ ಬಳಿಕ ಸರ್ಕಾರ ರಚನೆ ಕಾರ್ಯದಲ್ಲಿ ಮಗ್ನರಾಗಿದ್ದರು. ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ಮತ್ತು ಕಾಂಗ್ರೆಸ್‌ನ ಜತೆ ನಿರಂತರ ಸಂಪರ್ಕ ಸಾಧಿಸಿ ಮಾತುಕತೆ ನಡೆಸುವುದರಲ್ಲಿ ಕಳೆದ 10 ದಿನಗಳಿಂದ ಕುಮಾರಸ್ವಾಮಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅನಾರೋಗ್ಯದಿಂದ ಚಿಕಿತ್ಸೆಗೊಳಗಾಗಿದ್ದರೂ ಅದನ್ನು ಲೆಕ್ಕಿಸದೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದರು. ಅಲ್ಲದೇ, ಸರ್ಕಾರ ರಚನೆಯಲ್ಲಿ ಸಾಕಷ್ಟುಕಸರತ್ತು ನಡೆಸಿದರು. ಶುಕ್ರವಾರ ಬಹುಮತ ಸಾಬೀತು ಪಡಿಸಿದ ಬಳಿಕ ನಿರಾಳರಾಗಿದ್ದಾರೆ. ಹೀಗಾಗಿ ಶನಿವಾರ ವಿಶ್ರಾಂತಿ ಪಡೆದುಕೊಳ್ಳಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ಕಲ್ಲಿದ್ದಲು ವಿಷಯಕ್ಕೆ ಸಂಬಂಧಕ್ಕೆ ಪಟ್ಟಂತೆ ಕೇಂದ್ರದೊಂದಿಗೆ ಮಾತುಕತೆ ನಡೆಸಲು ದೆಹಲಿಗೆ ತೆರಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಇಂಧನ ಸಚಿವ ಪೀಯೂಷ್ ಗೋಯಲ್ ಅವರ ಸಮಯಾವಕಾಶ ಕೋರಿದ್ದಾರೆ. ಒಂದು ವೇಳೆ ಮಾತುಕತೆಗೆ ಸಮಯಾವಕಾಶ ಸಿಕ್ಕರೆ ಶನಿವಾರ ಸಂಜೆ ಅಥವಾ ಭಾನುವಾರ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ದೆಹಲಿಯಲ್ಲಿ ಕಾಂಗ್ರೆಸ್‌ನ ವರಿಷ್ಠರನ್ನು ಸಹ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.