ಮಳೆ ಹಾನಿ ಪರಿಹಾರಕ್ಕೆ 172 ಕೋಟಿ : ಸಿಎಂ

First Published Jun 6, 2018, 8:58 AM IST
Highlights

ಮಳೆ ಹಾನಿಗೆ ಸಂಬಂಧಪಟ್ಟಂತೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಜಿಲ್ಲಾಡಳಿತಗಳ ಬಳಿ ಇರುವ 172 ಕೋಟಿ ರು. ಅನುದಾನವನ್ನು ಆದ್ಯತೆಯ ಮೇರೆಗೆ ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಆದೇಶ ನೀಡಿದ್ದಾರೆ. 

ಬೆಂಗಳೂರು :  ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಮಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲು ಜಿಲ್ಲಾಡಳಿತಗಳ ಬಳಿ ಈಗಾಗಲೇ ಲಭ್ಯ ಇರುವ 172 ಕೋಟಿ ರು. ಅನುದಾನವನ್ನು ಆದ್ಯತೆಯ ಮೇರೆಗೆ ಸದ್ವಿನಿಯೋಗ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ 3-4 ದಿನಗಳಿಂದ ರಾಜ್ಯದ ಹಲವೆಡೆ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಯಾವುದೇ ವಿಶ್ರಾಂತಿ ಪಡೆಯದೆ ರಜಾ ದಿನದಲ್ಲಿಯೂ ಕಾರ್ಯನಿರ್ವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯ ಶ್ಲಾಘನೀಯ. ಮಳೆ ಹಾನಿಗೆ ಸಂಬಂಧಪಟ್ಟಂತೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಜಿಲ್ಲಾಡಳಿತಗಳ ಬಳಿ ಇರುವ 172 ಕೋಟಿ ರು. ಅನುದಾನವನ್ನು ಆದ್ಯತೆಯ ಮೇರೆಗೆ ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಮಗೆ ಹಂಚಿಕೆಯಾಗಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಜಿಲ್ಲೆಗಳಲ್ಲಿನ ವಸ್ತು ಸ್ಥಿತಿಯನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಆಧರಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೆತ್ತಿಕೊಳ್ಳಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರು ಮಳೆ ಹಾನಿ ಪ್ರದೇಶಗಳಿಗೆ ಜೂ.8ರ ನಂತರ ಭೇಟಿ ನೀಡುವುದಾಗಿ ಹೇಳಿದ್ದಾರೆ. ಅವರು ಪ್ರವಾಸ ಮಾಡಿ ಸರ್ಕಾರಕ್ಕೆ ವರದಿ ನೀಡಲಿ. ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವ್ಯಂಗ್ಯವಾಗಿ ಹೇಳಿದರು.

click me!