ಆಡಳಿತ ಯಂತ್ರ ಚುರುಕುಗೊಳಿಸಿದ ಸಿಎಂ ಕುಮಾರಸ್ವಾಮಿ

By Web DeskFirst Published Jul 30, 2018, 9:39 AM IST
Highlights

ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬಂದ ದಿನದಿಂದ ಸರ್ಕಾರ ರಚನೆ ಆಡಳಿತ ನಿರ್ವಹಣೆ ಬಗ್ಗೆ ತಲೆ ಕೆಡಿಸಿಕೊಂಡಿದ್ದ ಸಿಎಂ ಕುಮಾರಸ್ವಾಮಿ ಇದೀಗ ಮೊದಲ ಬಾರಿಗೆ ಆಡಳಿತ ಯಂತ್ರ ಚುರುಕುಗೊಳಿಸಲು ಮುಂದಾಗಿದ್ದಾರೆ. 

ಬೆಂಗಳೂರು :  ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಸಂಪುಟ ವಿಸ್ತರಣೆ, ಅಧಿವೇಶನ, ರೈತರ ಸಾಲ ಮನ್ನಾ, ರಾಜಕೀಯ ವಿಷಯದಲ್ಲಿ ಮುಳುಗಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈಗ ಆಡಳಿತವನ್ನು ಚುರುಕುಗೊಳಿಸಲು ಮುಂದಾಗಿದ್ದಾರೆ. ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಸೋಮವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಸಲಿದ್ದಾರೆ. 

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ  ಕಾರ್ಯನಿರ್ವ ಹಣಾಧಿಕಾರಿಗಳದೇ ಆಗಿರುವುದರಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ. ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳಾದರೂ ಆಡಳಿತ ಟೇಕಾಫ್ ಆಗಿಲ್ಲ, ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರ ನೀಡುವ ರೀತಿಯಲ್ಲಿ ಇನ್ನು ಮುಂದೆ ತಾವು ರಾಜಕೀಯ ನಿರ್ವಹಣೆ (ಪೊಲಿಟಿಕಲ್ ಮ್ಯಾನೇಜ್ ಮೆಂಟ್) ಬದಲು ಅಭಿವೃದ್ಧಿ ನಿರ್ವಹಣೆ (ಡೆವಲಪ್ ಮೆಂಟ್ ಮ್ಯಾನೇಜ್‌ಮೆಂಟ್) ಕಡೆಗೆ ಒತ್ತು ನೀಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಮೊದಲ ಹಂತದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಸಭೆಯಲ್ಲಿ ಪ್ರಮುಖವಾಗಿ ಸರ್ಕಾರ ಬಡವರ ಪರವಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಜಾರಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಜೊತೆಗೆ ಇತ್ತೀಚೆಗೆ ಮಂಡಿಸಿರುವ ಬಜೆಟ್‌ನಲ್ಲಿ ಘೋಷಿಸಿರುವ ಹಲವು ಯೋಜನೆಗಳ ಫಲಾನುಭವಿಗಳ ಆಯ್ಕೆ ಮಾಡಬೇಕು. ಸಮ್ಮಿಶ್ರ ಸರ್ಕಾರದ ಅಭದ್ರತೆಯಿಂದ ಆಡಳಿತ  ಯಂತ್ರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ದೂರು, ಅನುಮಾನ ಇಟ್ಟುಕೊಳ್ಳದೇ ಅಭಿವೃದ್ಧಿ ಕಡೆಗೆ ಗಮನ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡುವ ಸಾಧ್ಯತೆ ಇದೆ.

click me!