ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬಂಪರ್ ಕೊಡುಗೆ..?

By Kannadaprabha NewsFirst Published Jul 12, 2018, 9:00 AM IST
Highlights

 ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಗುರುವಾರ ಉಚಿತ ಬಸ್‌ ಪಾಸ್‌ ಘೋಷಿಸುವ ಸಾಧ್ಯತೆಯಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.
 

ಬೆಂಗಳೂರು :  ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಗುರುವಾರ ಉಚಿತ ಬಸ್‌ ಪಾಸ್‌ ಘೋಷಿಸುವ ಸಾಧ್ಯತೆಯಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.

ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯ ಕಲ್ಪಿಸಲಾಗಿದೆ. ಅದರಂತೆ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ಸಿಗಬೇಕೆಂಬುದು ನನ್ನ ಆಶಯ. ಈ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರ ಬಳಿಯೇ ಹಣಕಾಸು ಖಾತೆ ಇರುವುದರಿಂದ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ಟಿಕೆಟ್‌ ದರ ಏರಿಕೆ ಪ್ರಸ್ತಾವನೆ:  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಶೇ.20ರಷ್ಟುಟಿಕೆಟ್‌ ದರ ಏರಿಕೆ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಡೀಸೆಲ್‌ ದರ ಏರಿಕೆ, ಕಾರ್ಯಾಚರಣೆ ವೆಚ್ಚ ಹೆಚ್ಚಳವಾಗಿರುವುದರಿಂದ ದರ ಏರಿಕೆ ಮಾಡಬೇಕೆಂದು ಮನವಿ ಮಾಡಿದೆ. ಹಾಗಂತ ಏಕಾಏಕಿ ಟಿಕೆಟ್‌ ದರ ಏರಿಸಲು ಸಾಧ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕವೇ ಈ ಸಂಬಂಧ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಸಚಿವರು ಹೇಳಿದರು.

click me!