
ಬೆಂಗಳೂರು (ಮೇ.02):ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಒಳ ಒಪ್ಪಂದ ಏರ್ಪಡಲಿದೆ ಎಂಬ ಸುದ್ದಿಗಳನ್ನು ಮುಖ್ಯಮಂತ್ರಿ ಕಚೇರಿಯಿಂದಲೇ ಪ್ಲಾಂಟ್ ಮಾಡಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪವನ್ನು ತಳ್ಳಿ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದರಿಂದ ನಮಗೆ ಆಗುವ ಲಾಭವಾದರೂ ಏನು ಎಂದು ಪ್ರಶ್ನಿಸಿದ್ದಾರೆ.
ನಗರದ ಕಿದ್ವಾಯಿ ಸಂಸ್ಥೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾಂಗ್ರೆಸ್, ಜೆಡಿಎಸ್ ಒಳ ಒಪ್ಪಂದದ ಬಗ್ಗೆ ಕುಮಾರಸ್ವಾಮಿ ಅವರು ಮಾಡಿರುವ ಆರೋಪದ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ಕುಮಾರಸ್ವಾಮಿ ಅವರು ಮಾಡುತ್ತಿರುವ ಆರೋಪಗಳೆಲ್ಲವೂ ಸುಳ್ಳು. ನಾವೇಕೆ ಒಳ ಒಪ್ಪಂದದ ಬಗ್ಗೆ ಸುದ್ದಿ ಸೃಷ್ಟಿಸೋಣ? ಅದರಿಂದ ನಮಗೆ ಆಗುವ ಲಾಭವಾದರೂ ಏನು ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು. ಅಲ್ಲದೆ, ಕುಮಾರಸ್ವಾಮಿ ಅವರು ಮಾಡುತ್ತಿರುವ ಎಲ್ಲಾ ಆರೋಪಗಳೂ ಆಧಾರ ರಹಿತ ಮತ್ತು ರಾಜಕೀಯ ಪ್ರೇರಿತ ಎಂದರು.
ತನ್ವೀರ್ ವಿರುದ್ಧ ಸಾಕ್ಷಿ ಇದ್ದರೆ ನೀಡಲಿ:
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಗ್ರಂಥಾಲಯ ಇಲಾಖೆ ಮೇಲ್ವಿಚಾಕರ ವೇತನ ಹೆಚ್ಚಳ ವಿಚಾರವಾಗಿ ಲಂಚ ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಾಕ್ಷಿ ಇದ್ದರೆ ನೀಡಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಯಾರು ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಆದರೆ, ತಾವು ಮಾಡಿದ ಆರೋಪ ಸಾಬೀತುಪಡಿಸುವುದು ಬಹಳ ಮುಖ್ಯ. ತನ್ವೀರ್ ಸೇಠ್ ವಿರುದ್ಧ ಆರೋಪದ ಹಿಂದೆ ರಾಜಕೀಯ ಇರುವ ಶಂಕೆ ಇದೆ. ಆರೋಪ ಮಾಡಿದವರು ಸಾಕ್ಷ್ಯಾಧಾರಗಳಿದ್ದರೆ ನೀಡಲಿ, ಪರಿಶೀಲಿಸಿ ಕ್ರಮ ಕೈಗೊಳ್ಳೋಣ ಎಂದರು.
ಬೆಂಗಳೂರಿನಲ್ಲಿ ಎಐಸಿಸಿ ಮಹಾ ಅಧಿವೇಶನ ನಡೆಸುವ ಪ್ರಸ್ತಾವನೆ ಸದ್ಯಕ್ಕೆ ನಮ್ಮ ಮುಂದಿಲ್ಲ. ಈ ಸಂಬಂಧ ಹೈಕಮಾಂಡ್‌ನಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ.
- ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.