ರಾಜ್ಯದ ಎಲ್ಲ ಇಲಾಖೆಗಳಲ್ಲಿ ನೆನೆಗುದಿಗೆ ಬಿದ್ದಿರುವ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಸಿಎಂ ಆದೇಶ

Published : Jan 13, 2017, 03:12 PM ISTUpdated : Apr 11, 2018, 12:35 PM IST
ರಾಜ್ಯದ ಎಲ್ಲ ಇಲಾಖೆಗಳಲ್ಲಿ ನೆನೆಗುದಿಗೆ ಬಿದ್ದಿರುವ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಸಿಎಂ ಆದೇಶ

ಸಾರಾಂಶ

ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಕೊನೆಗೂ ಗಮನ ನೀಡಿರುವ ರಾಜ್ಯ ಸರ್ಕಾರ, ರಾಜ್ಯದ ಎಲ್ಲ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ಬೆಂಗಳೂರು (ಜ.13): ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಕೊನೆಗೂ ಗಮನ ನೀಡಿರುವ ರಾಜ್ಯ ಸರ್ಕಾರ, ರಾಜ್ಯದ ಎಲ್ಲ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯವೈಖರಿಯ ಪರಿಶೀಲನೆ ನಡೆಸಿದ ಅವರು, ಸರ್ಕಾರದ ಎಲ್ಲ ಹಂತದಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಗುರುತಿಸಿ, ಶೀಘ್ರವೇ ಭರ್ತಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ರಾಜ್ಯದ ವಿವಿಧ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು ಮತ್ತು ವಿಶ್ವ ವಿದ್ಯಾಲಯಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಇದ್ದು, ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಸರ್ಕಾರದ ಮಹತ್ವಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾಗಿರುವ ವಿದ್ಯಾಸಿರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ. ಪ್ರವರ್ಗ-೧, ೨-ಎ ವರ್ಗಕ್ಕೆ ಸೇರಿದ ಸಂಘ-ಸಂಸ್ಥೆಗಳು ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು ಎಂದು ತಿಳಿಸಿದರು.

ವೈದ್ಯಕೀಯ ಮತ್ತು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶುಲ್ಕವನ್ನು ಸಿಇಟಿಗೆ ವಿಳಂಬವಿಲ್ಲದೆ ಮರು ಪಾವತಿ ಮಾಡಬೇಕು. ವಿವಿಧ ಸಂಘ-ಸಂಸ್ಥೆಗಳು ನಡೆಸುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಕ್ಕೆ ತಲಾ ಐದು ಲಕ್ಷ ರೂ.ಗಳ ನಿರ್ವಹಣಾ ಅನುದಾನವನ್ನೂ ಕೂಡಲೇ ಬಿಡುಗಡೆ ಮಾಡಬೇಕು. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಮುಂದಿನ ಬಜೆಟ್‌ನಲ್ಲಿ ಹಣಕಾಸು ಸೌಲಭ್ಯ ಪಡೆಯಲು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಹಾಸ್ಟೆಲ್‌ಗಳಿಗೆ ಸ್ವಂತ ಕಟ್ಟಡ ನಿರ್ಮಿಸುವಾಗ ಲೈಬ್ರರಿಗೂ ಸ್ಥಳಾವಕಾಶ ಒದಗಿಸಿ, ಹಾಲಿ ಇರುವ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಹಾಸ್ಟೆಲ್‌ಗಳಲ್ಲಿಯೂ ಲೈಬ್ರರಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಅಡುಗೆಯವರು ಮತ್ತು ಅಡುಗೆ ಸಹಾಯಕರ ಹುದ್ದೆಗಳ ಭರ್ತಿ ಪ್ರಕ್ರಿಯೆಗೂ ಶೀಘ್ರ ಚಾಲನೆ ನೀಡಲಾಗುವುದು. ೬,೫೦೦ ಹುದ್ದೆಗಳು ಖಾಲಿ ಇದ್ದು, ೪ ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ನೇಮಕ ಸಂದರ್ಭದಲ್ಲಿ ಈಗಾಗಲೇ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗೂ ಆದ್ಯತೆ ಕೊಡಬೇಕು ಎಂದು ನಿರ್ದೇಶನ ನೀಡಿದರು.

ಹಾಸ್ಟೆಲ್‌ಗಳಲ್ಲಿ ಕೈಗೊಂಡಿರುವ ಸುಧಾರಣಾ ಕ್ರಮಗಳನ್ನು ವಿವರಿಸಿದ ಅಧಿಕಾರಿಗಳು, ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ಜಾರಿಗೆ ತರಲಾಗಿದೆ. ಹಾಸ್ಟೆಲ್ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಸೌಲಭ್ಯ ಒದಗಿಸಿದೆ. ಗುಣಮಟ್ಟದ ಆಹಾರ ವ್ಯವಸ್ಥೆ ಮಾಡಿರುವುದರ ಜೊತೆಗೆ ನಿರ್ವಹಣೆಯಲ್ಲಿ ಸುಧಾರಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕಟ್ಟಡಗಳ ನಿರ್ಮಾಣದ ಪ್ರಗತಿ ಪರಿಶೀಲನೆಗೆ ವರ್ಕ್‌ಸಾಫ್ಟ್ ಅಳವಡಿಸಲಾಗಿದೆ. ಬಾಲಕಿಯರ ಹಾಸ್ಟೆಲ್‌ಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇಲಾಖೆಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಅಡುಗೆಯವರು ಮತ್ತು ಅಡುಗೆ ಸಹಾಯಕರ ೪೦೧೭ ಹುದ್ದೆಗಳನ್ನು ಭರ್ತಿ ಮಾಡಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೇಳಿದರು.

ಸಮಾಜ ಕಲ್ಯಾಣ ಸಚಿವ ಆಂಜನೇಯ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಯವರ ಸಲಹೆಗಾರರಾದ ಎಂ. ರಾಮಯ್ಯ, ವಿಧಾನ ಪರಿಷತ್ ಸದಸ್ಯ ಎಚ್.ಎಂ. ರೇವಣ್ಣ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮೊಹಮದ್ ಮೊಹ್ಸಿನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮತ್ತಿತರರು ಸಭೆಯಲ್ಲಿದ್ದರು.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೂಪರ್ ಪವರ್ ಅಮೆರಿಕಕ್ಕೆ ಭಾರತದ 'ಬೇಳೆಕಾಳು' ಪಂಚ್! ಇಕ್ಕಟ್ಟಿಗೆ ಸಿಲುಕಿದ ಟ್ರಂಪ್ ಸರ್ಕಾರ!
ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?