
ಬೆಂಗಳೂರು[ಜು.10]: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರಕ್ಕೆ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದು, ಇಂತಹ ನಿರ್ಧಾರದಿಂದ ತಳಮಟ್ಟದಲ್ಲಿ ಕಾರ್ಯಕರ್ತರನ್ನು ಕಳೆದುಕೊಳ್ಳುವ ಅಪಾಯ ಸೃಷ್ಟಿಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಲೋಕಸಭಾ ಚುನಾವಣೆ ತಯಾರಿ ಹಿನ್ನೆಲೆಯಲ್ಲಿ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ದಿನೇಶ್ ಗುಂಡೂರಾವ್, ನಿರ್ಗಮಿಸಲಿರುವ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗಳ ಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳು ಅದರಲ್ಲೂ ವಿಶೇಷವಾಗಿ ಹಳೆ ಮೈಸೂರು ಭಾಗದ ಪರಾಜಿತ ಅಭ್ಯರ್ಥಿಗಳು ಈ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಪ್ರಭಾವಶಾಲಿಯಾಗಿರುವ ಕ್ಷೇತ್ರಗಳಲ್ಲಿ ಇಂತಹ ಮೈತ್ರಿ ಕೆಲಸ ಮಾಡಬಹುದು.
ಕಾಂಗ್ರೆಸ್ ಗೆ ನಷ್ಟ
ಆದರೆ, ರಾಜ್ಯದ ದಕ್ಷಿಣ ಭಾಗದಲ್ಲಿ ಹೋರಾಟವಿರುವುದೇ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ. ಈ ಭಾಗದಲ್ಲಿ ಮೈತ್ರಿ ಮಾಡಿಕೊಂಡರೆ ಅದರಿಂದ ಪಕ್ಷಕ್ಕೆ
ಲಾಭಕ್ಕಿಂತ ನಷ್ಟವೇ ಹೆಚ್ಚು. ಏಕೆಂದರೆ, ಮೈತ್ರಿಯ ಪರಿಣಾಮವಾಗಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‌ಗೆ ಕೆಲಸ ಮಾಡಲಾಗದೇ ಅನಿವಾರ್ಯವಾಗಿ ಬಿಜೆಪಿಯತ್ತ ಮುಖ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದು ಕ್ರಮೇಣ ಕ್ಷೇತ್ರದಲ್ಲಿ ಪಕ್ಷ ಹಿಡಿತ ಕಳೆದುಕೊಳ್ಳಲು ಕಾರಣವಾಗುತ್ತದೆ. ಹೀಗಾಗಿ ಮೈತ್ರಿ ಬೇಡ ಎಂದು ಪರಾಜಿತ ಅಭ್ಯರ್ಥಿಗಳು ವಾದಿಸಿದರು ಎನ್ನಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿದ ನಾಯಕರು, ಲೋಕಸಭಾ ಮೈತ್ರಿ ವಿಚಾರ ರಾಜ್ಯ ನಾಯಕತ್ವದ ಮಟ್ಟದಲ್ಲಿ ತೀರ್ಮಾನವಾಗುವುದಿಲ್ಲ. ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ.ನಿಮ್ಮ ಅಭಿಪ್ರಾಯವನ್ನು ಹೈಕಮಾಂಡ್‌ಗೆ ತಲುಪಿಸುತ್ತೇವೆ. ಆದರೆ, ಅಂತಿಮವಾಗಿ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೋ ಅದನ್ನು ಒಪ್ಪಬೇಕಾಗುತ್ತದೆ ಎಂದು ಸಮಜಾಯಿಷಿ ನೀಡಿದರು ಎನ್ನಲಾಗಿದೆ.
ಇದಕ್ಕೆ ಕೆಲ ಪರಾಜಿತ ಅಭ್ಯರ್ಥಿಗಳು, ಮೈತ್ರಿ ಅನಿವಾರ್ಯ ಎನ್ನುವುದೇ ಆದರೆ ಬಿಜೆಪಿ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಳ್ಳಲಿ. ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನವನ್ನು ಕಾಂಗ್ರೆಸ್ ಪಡೆದುಕೊಳ್ಳಬೇಕು. ಲೋಕಸಭೆ ಚುನಾವಣೆ ಹೊರತಾಗಿ ಮತ್ಯಾವ ಹಂತದಲ್ಲಿ ಜೆಡಿಎಸ್ ಜತೆ ಮೈತ್ರಿಯನ್ನು ಯಾವ ಕಾರಣಕ್ಕೂ ಮಾಡಿಕೊಳ್ಳಬಾರದು. ಮುನ್ಸಿಪಾಲಿಟಿ ಮಟ್ಟದಲ್ಲಂತೂ ನಮ್ಮ ಹೋರಾಟವಿರುವುದೆ ಜೆಡಿಎಸ್ ಜತೆ, ಅಲ್ಲಿ ಮೈತ್ರಿ ಮಾಡಿಕೊಂಡರೆ ನಮ್ಮ ಕಾರ್ಯಕರ್ತರು ಬಿಜೆಪಿಯತ್ತ ಮುಖ ಮಾಡುವುದನ್ನು ತಡೆಯಲು ಸಾಧ್ಯವಿಲ್ಲ.
ಇದು ಭವಿಷ್ಯದಲ್ಲಿ ಕಾಂಗ್ರೆಸ್ ಕ್ಷೇತ್ರದಲ್ಲಿ ನಾಶವಾಗಲು ಕಾರಣವಾಗುತ್ತದೆ ಎಂದು ಎಚ್ಚರಿಸಿದರು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಕೆಲ ಶಾಸಕರು, ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿ ಇರುವುದರಿಂದ ಕ್ಷೇತ್ರದಲ್ಲಿ ವರ್ಗಾವಣೆ ಹಾಗೂ ಅಭಿವೃದಿಟಛಿ ಕೆಲಸಗಳನ್ನು ಕೈಗೊಳ್ಳುವ ವೇಳೆ ಪರಾಜಿತ ಅಭ್ಯರ್ಥಿಗಳ ಮಾತಿಗೆ ಮನ್ನಣೆ ನೀಡುವಂತೆ ಆಗ್ರಹಿಸಿದರು ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.