2 ಕ್ಷೇತ್ರಗಳಿಗೆ ಉಪ ಚುನಾವಣೆ : ಕಾಂಗ್ರೆಸ್ - ಜೆಡಿಎಸ್ ದೋಸ್ತಿ..?

By Web DeskFirst Published Oct 3, 2018, 8:22 AM IST
Highlights

ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್‌ ಮತ್ತು ಕಾಂಗ್ರೆಸ್‌, ಮುಂಬರುವ ಈ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನೇರವಾಗಿ ಹೊಂದಾಣಿಕೆ ಮಾಡಿಕೊಳ್ಳುವ ನಿರೀಕ್ಷೆಯಿದೆ.

ಬೆಂಗಳೂರು :  ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ‘ಫ್ರೆಂಡ್ಲಿ ಫೈಟ್‌’ ಮಾಡಿದ್ದ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್‌ ಮತ್ತು ಕಾಂಗ್ರೆಸ್‌, ಮುಂಬರುವ ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೇರವಾಗಿ ಹೊಂದಾಣಿಕೆ ಮಾಡಿಕೊಳ್ಳುವ ನಿರೀಕ್ಷೆಯಿದೆ.

ಮಂಗಳವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಉಪಾಹಾರ ಭೇಟಿಯ ವೇಳೆ ಈ ಬಗ್ಗೆ ಪ್ರಸ್ತಾಪವಾಗಿದೆ ಎಂದು ತಿಳಿದು ಬಂದಿದೆ.

ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್‌ ಮತ್ತು ಜಮಖಂಡಿಯಲ್ಲಿ ಕಾಂಗ್ರೆಸ್‌ ಪಕ್ಷಗಳು ಪರಸ್ಪರ ಹೊಂದಾಣಿಕೆಯ ಮೂಲಕ ಸ್ಪರ್ಧೆ ನಡೆಸುವ ವಿಷಯ ಚರ್ಚೆಗೆ ಬಂತು. ಆದರೆ, ಈ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳಲಿಲ್ಲ. ಉಭಯ ಪಕ್ಷಗಳ ವರಿಷ್ಠರೊಂದಿಗೆ ಮಾತುಕತೆ ನಡೆಸಿದ ನಂತರ ಅಂತಿಮ ನಿಲುವು ಪ್ರಕಟಿಸಲು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಗಾಂಧಿ ಜಯಂತಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಕುಮಾರಸ್ವಾಮಿ ಮತ್ತು ಪರಮೇಶ್ವರ್‌ ಅವರಿಬ್ಬರೂ ತೆರಳಬೇಕಿತ್ತು. ಅದಕ್ಕೂ ಮೊದಲು ಮುಖ್ಯಮಂತ್ರಿಗಳು ಇದ್ದ ತಾಜ್‌ ವೆಸ್ಟೆಂಡ್‌ ಹೋಟೆಲ್‌ಗೆ ಪರಮೇಶ್ವರ್‌ ಆಗಮಿಸಿದರು. ಅವರಿಬ್ಬರೂ ಸುಮಾರು ಒಂದು ಗಂಟೆ ಕಾಲ ಮಾತುಕತೆ ನಡೆಸಿದರು. ರಾಜಕೀಯ ಹಾಗೂ ಸರ್ಕಾರ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಸರ್ಕಾರದ ವರ್ಚಸ್ಸು ಹೆಚ್ಚಿಸುವ ಬಗ್ಗೆಯೂ ಉಭಯ ನಾಯಕರು ಸಮಾಲೋಚನೆ ನಡೆಸಿದರು ಎನ್ನಲಾಗಿದೆ.

ಕೆಲವು ದಿನಗಳಲ್ಲಿಯೇ ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಮತ್ತು ರಾಮನಗರದಿಂದ ಸ್ಪರ್ಧಿಸಿ ಎರಡರಲ್ಲೂ ಗೆಲುವು ಸಾಧಿಸಿದ್ದರು. ಅಂತಿಮವಾಗಿ ಚನ್ನಪಟ್ಟಣ ಉಳಿಸಿಕೊಂಡು ರಾಮನಗರ ಬಿಟ್ಟುಕೊಟ್ಟಿದ್ದರು. ಇನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕ್ಷೇತ್ರದ ಕಾಂಗ್ರೆಸ್‌ ಶಾಸಕರಾಗಿದ್ದ ಸಿದ್ದು ನ್ಯಾಮಗೌಡ ಅವರ ಅಕಾಲಿಕ ನಿಧನದಿಂದ ಅಲ್ಲಿ ಚುನಾವಣೆ ನಡೆಯಬೇಕಿದೆ. ಉಭಯ ಕ್ಷೇತ್ರಗಳಿಗೆ ಒಟ್ಟಿಗೆ ಉಪಚುನಾವಣೆ ಎದುರಾಗುವುದು ಬಹುತೇಕ ನಿಶ್ಚಿತವಾಗಿದೆ.

ಈ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಹೋರಾಟ ನಡೆಸಿದಲ್ಲಿ ಅದರ ಲಾಭ ಬಿಜೆಪಿ ಪಡೆದುಕೊಳ್ಳಬಹುದು. ಮೇಲಾಗಿ ಉತ್ತಮ ಸಂದೇಶ ರವಾನಿಸಿದಂತಾಗುವುದಿಲ್ಲ. ಹೀಗಾಗಿ, ಜೆಡಿಎಸ್‌ನಿಂದ ತೆರವಾಗಿರುವ ರಾಮನಗರದಲ್ಲಿ ಜೆಡಿಎಸ್‌ಗೆ ಕಾಂಗ್ರೆಸ್‌ ಬೆಂಬಲಿಸುವುದು ಮತ್ತು ಕಾಂಗ್ರೆಸ್‌ನಿಂದ ತೆರವಾಗಿರುವ ಜಮಖಂಡಿಯಲ್ಲಿ ಕಾಂಗ್ರೆಸ್ಸಿಗೆ ಜೆಡಿಎಸ್‌ ಬೆಂಬಲಿಸುವುದು ಸೂಕ್ತ ಎಂಬ ಅಭಿಪ್ರಾಯವನ್ನು ಕುಮಾರಸ್ವಾಮಿ ಮತ್ತು ಪರಮೇಶ್ವರ್‌ ಅವರು ವ್ಯಕ್ತಪಡಿಸಿದರು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

click me!