
ಬೆಂಗಳೂರು(ಜ.20): ಬಗರ್‌ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪದ ಮೇಲೆ ಬಿಜೆಪಿ ಮುಖಂಡ ಆರ್. ಅಶೋಕ್ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಸಂಬಂಧ ರಾಜ್ಯ ಸರ್ಕಾರ, ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
ತಮ್ಮ ವಿರುದ್ಧದ ಎಫ್'ಐಆರ್ ರದ್ದುಪಡಿಸುವಂತೆ ಕೋರಿ ಆರ್. ಅಶೋಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ಬಿ. ಬೂದಿಹಾಳ ಅವರಿದ್ದ ಏಕ ಸದಸ್ಯ ಪೀಠ ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಎಸಿಬಿ, ದೂರುದಾರ ಎ. ಆನಂದ್ ಮತ್ತು ಕರ್ನಾಟಕ ಲೋಕಾಯುಕ್ತ ರಿಜಿಸ್ಟ್ರಾರ್‌ಗೆ ನೋಟಿಸ್ ಜಾರಿ ಮಾಡಿತು. ವಿಚಾರಣೆ ವೇಳೆ ಅಶೋಕ್ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ರಾಜಕೀಯ ಪ್ರೇರಿತ ಹಾಗೂ ದುರುದ್ದೇಶದಿಂದ ದೂರು ದಾಖಲಿಸಲಾಗಿದೆ.
ದೂರುದಾರರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಇದು ಹಳೆ ಪ್ರಕರಣವಾಗಿದ್ದು, ಲೋಕಾಯುಕ್ತದಲ್ಲಿ ಇನ್ನು ಬಾಕಿ ಇರುವಾಗ ದೂರು ದಾಖಲಿಸುವ ಅಗತ್ಯವೇನು ಇರಲಿಲ್ಲ. ಹೀಗಾಗಿ, ದೂರಿಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದರು. ಇದಕ್ಕೆ ನ್ಯಾಯಪೀಠ ಪ್ರತಿಕ್ರಿಯಿಸಿ, ಮೊದಲು ಪ್ರತಿವಾದಿಗಳು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಿ. ಬಳಿಕ ಅರ್ಜಿ ಕುರಿತು ವಿಚಾರಣೆ ನಡೆಸಿ, ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.