ಪ್ರತಿದಿನ ಡಿಸಿ, ಸಿಇಒ ಗ್ರಾಮ ಭೇಟಿ ಕಡ್ಡಾಯ

By Web DeskFirst Published May 16, 2019, 7:20 AM IST
Highlights

ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಈ ನಿಟ್ಟಿನಲ್ಲಿ ಸಿಇಒ ಹಾಗೂ ಜಿಲ್ಲಾಧಿಕಾರಿ ಗ್ರಾಮಕ್ಕೆ ಭೇಟಿ ನೀಡುವುದು ಕಡ್ಡಾಯ ಎಂದು ಸಿಎಂ ಕುಮಾರಸ್ವಾಮಿ ಆದೇಶಿಸಿದ್ದಾರೆ. 

ಬೆಂಗಳೂರು :  ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿ ನಿಭಾಯಿಸಲು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವುದು ಮತ್ತು ಜಾನುವಾರುಗಳಿಗೆ ಮೇವು ಸರಬರಾಜು ಮಾಡುವಲ್ಲಿ ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕಡ್ಡಾಯವಾಗಿ ಪ್ರತಿ ದಿನ ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಬೇಕು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.

ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕರ್‌ಗಳಿಗೆ ಏಪ್ರಿಲ್‌ ತಿಂಗಳವರೆಗಿನ ಬಾಕಿ ಬಿಲ್‌ ಪಾವತಿಯನ್ನು ವಾರದೊಳಗೆ ಪೂರ್ಣಗೊಳಿಸಬೇಕು. ಪ್ರತಿ 15 ದಿನಗಳಿಗೊಮ್ಮೆ ಬಿಲ್‌ ಪಾವತಿಸಬೇಕು. ಒಂದು ವೇಳೆ ಅವಧಿ ಮುಗಿದ ಬಳಿಕ ಬಿಲ್‌ ಸಲ್ಲಿಸದಿದ್ದಲ್ಲಿ ಸಂಬಂಧಪಟ್ಟಪಂಚಾಯತ್‌ ಅಭಿವೃದ್ಧಿ ಅಧಿಕಾರಿ (ಪಿಡಿಓ) ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳೇ (ಇಓ) ಹೊಣೆಗಾರರಾಗಲಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.

ಬುಧವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬರ ಪರಿಸ್ಥಿತಿ ನಿರ್ವಹಣೆ, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುತ್ತಿರುವುದು ಮತ್ತು ಜಾನುವಾರುಗಳಿಗೆ ಮೇವು ಸರಬರಾಜಿನ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಯಾವ ಗ್ರಾಮಗಳಲ್ಲಿ ಸಮಸ್ಯೆಗಳಿವೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಿ ಪರಿಹಾರ ಒದಗಿಸಲು ಅಗತ್ಯ ತೀರ್ಮಾನ ಕೈಗೊಳ್ಳಬೇಕು. ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಸರಬರಾಜು ಮತ್ತು ಮೇವಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸಬೇಕು. ಮೇವು ಸಂಗ್ರಹದಲ್ಲಿ ಎಲ್ಲಿಯೂ ಲೋಪವಾಗಬಾರದು. ಕುಡಿಯುವ ನೀರಿನ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಕೆ ಕಾರ್ಯವು ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಜಿಪಿಎಸ್‌ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು. ಹಣ ಸೋರಿಕೆಯಾಗುವುದನ್ನು ಅಧಿಕಾರಿಗಳು ತಡೆಗಟ್ಟಬೇಕು. ಪ್ರತಿ ಹೋಬಳಿಗೆ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರನ್ನು ನೋಡಲ್‌ ಅಧಿಕಾರಿಯಾಗಿ ನಿಯೋಜಿಸಿ ಹೋಬಳಿ ಹಂತದ ಎಲ್ಲಾ ಕುಡಿಯುವ ನೀರಿನ ವ್ಯವಸ್ಥೆ, ಉದ್ಯೋಗ ಸೃಜನೆ, ಮೇವು ಪರಿಸ್ಥಿತಿ ಇತ್ಯಾದಿ ಎಲ್ಲಾ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರತಿನಿತ್ಯ ಪರಿಶೀಲನೆ ನಡೆಸಬೇಕು. ಎಲ್ಲಿಯಾದರೂ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣ ದುರಸ್ತಿ ಕೈಗೊಳ್ಳುವುದು. ಒಂದು ವೇಳೆ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರಿನ ಲಭ್ಯತೆ ಇಲ್ಲದಿದ್ದಲ್ಲಿ ಟ್ಯಾಂಕರ್‌ಗಳ ಮೂಲಕ ಪೂರೈಕೆ ಮಾಡಬೇಕು. ರಾಜ್ಯದಲ್ಲಿ 1873 ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದುಕೊಳ್ಳಲಾಗಿದ್ದು, ನೀರು ಹೆಚ್ಚಿರುವ ಕೊಳವೆ ಬಾವಿಗಳನ್ನು ಬಾಡಿಗೆ ಪಡೆಯಬೇಕು. ಅಂತರ್ಜಲ ಸಾರ್ವಜನಿಕರ ಸ್ವತ್ತಾಗಿರುವ ಹಿನ್ನೆಲೆಯಲ್ಲಿ ಅಗತ್ಯವಿದ್ದರೆ ಖಾಸಗಿ ಕೊಳವೆ ಬಾವಿಗಳನ್ನು ವಶಕ್ಕೆ ಪಡೆಯಲು ಅಧಿಕಾರಿಗಳು ಹಿಂಜರಿಯಬಾರದು. ಹೊಸದಾಗಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದ ಗ್ರಾಮಗಳಿಗೆ 24 ಗಂಟೆಯೊಳಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜಿಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದ ಅವರು, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುವ ಮೂಲಕ ಗುಳೆ ಹೋಗುವುದನ್ನು ತಪ್ಪಿಸಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಸಚಿವರಾದ ಆರ್‌.ವಿ.ದೇಶಪಾಂಡೆ, ಕೃಷ್ಣ ಬೈರೇಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‌ಭಾಸ್ಕರ್‌, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌.ಪ್ರಸಾದ್‌, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಬಸವರಾಜ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

ಕುಡಿಯುವ ನೀರಿಗಾಗಿ ಹೆಲ್ಪ್‌ಲೈನ್‌

ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಎಲ್ಲಾ ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ 24/7 ಸಹಾಯವಾಣಿಗಳನ್ನು ಆರಂಭಿಸಲಾಗಿದೆ. ಸಹಾಯವಾಣಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತ್ಯೇಕವಾಗಿ ಕಾಲ್‌ಸೆಂಟರ್‌ ಆರಂಭಿಸಲಾಗಿದೆ. ನೀರಿನ ಸಮಸ್ಯೆ ತಲೆದೋರದಿರುವಂತೆ ಕ್ರಮ ಕೈಗೊಳ್ಳಬೇಕು. ಕಾಲ್‌ ಸೆಂಟರ್‌ಗಳಿಗೆ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರೆ ತಕ್ಷಣ ಸ್ಪಂದಿಸಬೇಕು ಎಂದು ತಿಳಿಸಿದರು.

click me!