
ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆ ಪ್ರಮಾಣದ ವಿಚಾರದಲ್ಲಿ ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷಗಳ ನಡುವಿನ ಭಿನ್ನ ಧೋರಣೆ ಮುಂದುವರಿದಿದ್ದು, ಗೊಂದಲ ಪರಿಸ್ಥಿತಿ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಅನ್ನಭಾಗ್ಯ ಯೋಜನೆಯಡಿ 7 ಕೆ.ಜಿ. ಅಕ್ಕಿ ನೀಡುವುದಾಗಿ ಆಹಾರ ಸಚಿವ ಜಮೀರ್ ಅಹ್ಮದ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರೆ, ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಎಷ್ಟು ಅಕ್ಕಿ ನೀಡಬೇಕು ಎಂಬುದರ ಬಗ್ಗೆ ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.
ಏಳು ಕೆ.ಜಿ. ಅಕ್ಕಿ ವಿತರಣೆಗೆ ಜಮೀರ್ ಅಹ್ಮದ್ ಬದ್ಧವಾಗಿದ್ದು, ಮುಖ್ಯಮಂತ್ರಿಗಳ ನಿಲುವಿಗೆ ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮಂಗಳವಾರವಷ್ಟೇ ಮಾಧ್ಯಮದವರ ಮುಂದೆ ಅಕ್ಕಿ ಪ್ರಮಾಣ ಇಳಿಸುವ ಕುರಿತು ಮುಖ್ಯಮಂತ್ರಿ ತಮ್ಮೊಂದಿಗೆ ಆಗಲಿ, ಇಲಾಖೆಯ ಅಧಿಕಾರಿಗಳೊಂದಿಗೆ ಆಗಲಿ ಚರ್ಚೆ ಮಾಡಿಲ್ಲ.
ಯಾವುದೇ ಮಾಹಿತಿ ಇಲ್ಲದ ಕಾರಣ ಮೊದಲಿನಂತೆ ಏಳು ಕೆಜಿ ಅಕ್ಕಿ ನೀಡಲಾಗುವುದು ಎಂದಿದ್ದರು. ಬುಧವಾರ ತಮ್ಮ ಆಪ್ತರ ಬಳಿ ಮತ್ತೆ ಇದನ್ನೇ ಪುನರುಚ್ಚರಿಸಿರುವ ಜಮೀರ್ ಅಹ್ಮದ್, ಅಧಿವೇಶನದಲ್ಲಿ ಮಾತನಾಡುವಾಗ ಏಳು ಕೆ.ಜಿ. ಅಕ್ಕಿ ಕೊಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಹೀಗಾಗಿ ಅದೇ ರೀತಿಯಾಗಿ ಅಕ್ಕಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರಕ್ಕೆ ಆರ್ಥಿಕ ಹೊರೆಯಾದಲ್ಲಿ ಮುಂದೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕೆ ಏಳು ಕೆ.ಜಿ ಅಕ್ಕಿಯನ್ನು ನೀಡಲಾಗುವುದು ಎಂದು ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಜಮೀರ್ ಅಹ್ಮದ್ ಹೇಳಿಕೆಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಅಕ್ಕಿ ಎಷ್ಟು ನೀಡಬೇಕು ಎಂಬುದರ ಕುರಿತು ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಜಮೀರ್ ಅಹ್ಮದ್ ಅವರು ಏಳು ಕೆ.ಜಿ. ಅಕ್ಕಿ ನೀಡುವ ಬಗ್ಗೆ ಹೇಳಿಕೆ ನೀಡಿರಬಹುದು. ಆದರೆ, ಅಧಿಕಾರಿಗಳ ಜತೆ ಚರ್ಚಿಸಿ ನಾನು ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.