
ಬೆಂಗಳೂರು : ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಸಚಿವ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಭಿನ್ನಮತ ಭುಗಿಲೆಬ್ಬಿಸಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಶುಕ್ರವಾರ ನಗರದಲ್ಲಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್, ಲಿಂಗಾಯತ ಧರ್ಮದ ಕುರಿತು ಡಿ.ಕೆ.ಶಿವಕುಮಾರ್ ಜತೆ ನಾನು ಚರ್ಚೆ ಮಾಡಿಲ್ಲ. ಎಲ್ಲ ಪಕ್ಷದ ರಾಜಕಾರಣಿಗಳು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿದ್ದಾರೆ. ಪಕ್ಷಕ್ಕೂ ಧರ್ಮದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲ. ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಡಿ.ಕೆ. ಶಿವಕುಮಾರ್ ಹಾಗೂ ಎಂ.ಬಿ. ಪಾಟೀಲ್ ನೀಡಿರುವ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದರು.
ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಎಲ್ಲರೂ ಒಟ್ಟಾಗಿ ತೀರ್ಮಾನ ಮಾಡಿದ್ದೇವೆ. ಆಗ ಡಿ.ಕೆ. ಶಿವಕುಮಾರ್ ಸಚಿವ ಸಂಪುಟ ಸಭೆಯಲ್ಲಿ ಇದ್ದು ಪ್ರತ್ಯೇಕ ಧರ್ಮಕ್ಕೆ ಬೆಂಬಲ ಸೂಚಿಸಿರಬಹುದು. ಆದರೆ, ಚುನಾವಣೆ ನಂತರ ಅವರ ಅಭಿಪ್ರಾಯ ಬದಲಾಗಿದೆ. ವಿಧಾನಸಭೆಯಲ್ಲಿ ಬಂದ ಫಲಿತಾಂಶ ನೋಡಿ ಇದು ತಪ್ಪು ನಿರ್ಧಾರ ಎನಿಸಿರಬಹುದು. ಹೀಗಾಗಿ ಪ್ರತ್ಯೇಕ ಧರ್ಮದ ವಿಷಯಕ್ಕೆ ಕೈ ಹಾಕಬಾರದಿತ್ತು ಎಂಬ ಹೇಳಿಕೆ ನೀಡಿದ್ದಾರೆ ಎನಿಸುತ್ತದೆ. ಇದು ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದಂತಾಗುವುದಿಲ್ಲ. ಬದಲಿಗೆ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಹೇಳಿಕೆ ಆಗುತ್ತದೆ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಸಮರ್ಥಿಸಿಕೊಂಡರು.
ಉಪ ಚುನಾವಣೆ ಬಗ್ಗೆ ಚರ್ಚೆ: ಇದೇ ವೇಳೆ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 3ರಂದು ನಡೆಯಲಿರುವ ಉಪ ಚುನಾವಣೆ ಬಗ್ಗೆಯೂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಉಸ್ತುವಾರಿಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡಿದ್ದು, ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ವಿವಾದಾತ್ಮಕ ಹೇಳಿಕೆ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.