
ಬೆಂಗಳೂರು : ದ್ವಿತೀಯ ಪಿಯು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ಶಿಕ್ಷಕರ ನಿರ್ಲಕ್ಷ್ಯದಿಂದ ಸಾವಿರಾರು ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ 2119 ಉತ್ತರ ಪತ್ರಿಕೆಗಳಲ್ಲಿ ಆರರಿಂದ 20 ಅಂಕದವರೆಗೆ ಮತ್ತು ದ್ವಿತೀಯ ಪಿಯುಸಿಯಲ್ಲಿ 2451 ಉತ್ತರ ಪತ್ರಿಕೆಗಳಲ್ಲಿ 10ರಿಂದ 38 ಅಂಕದವರೆಗೆ ವ್ಯತ್ಯಾಸಗಳು ಕಂಡುಬಂದಿವೆ. ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವೇಳೆ ಶಿಕ್ಷಕರ ಬೇಜವಾಬ್ದಾರಿತನ ಬೆಳಕಿಗೆ ಬಂದಿದೆ.
ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ಒಟ್ಟಾರೆ 60,027 ಉತ್ತರ ಪತ್ರಿಕೆಗಳ ಛಾಯಾಪ್ರತಿಗಾಗಿ ಅರ್ಜಿ ಸ್ವೀಕರಿಸಲಾಗಿತ್ತು. ಈ ಪೈಕಿ 13,865 ಉತ್ತರ ಪತ್ರಿಕೆಗಳನ್ನು ಮರು ಮೌಲ್ಯಮಾಪನ ಮಾಡಲಾಗಿದೆ. 2119 ಉತ್ತರ ಪತ್ರಿಕೆಗಳಿಗೆ ಹೆಚ್ಚಿನ ಅಂಕಗಳು ಲಭಿಸಿವೆ. ಅದೇ ರೀತಿ ದ್ವಿತೀಯ ಪಿಯುಸಿಯಲ್ಲಿ 36 ಸಾವಿರ ಉತ್ತರ ಪತ್ರಿಕೆಗಳನ್ನು ಮರು ಮೌಲ್ಯಮಾಪನ ಮಾಡಲಾಗಿತ್ತು. ಈ ಪೈಕಿ 85 ಸಾವಿರಕ್ಕೂ ಹೆಚ್ಚಿನ ಛಾಯಾಪ್ರತಿಗಳನ್ನು ವಿದ್ಯಾರ್ಥಿಗಳು ಪಡೆದಿದ್ದರು. ಇದರಲ್ಲಿ 2451 ಉತ್ತರ ಪತ್ರಿಕೆಗಳಲ್ಲಿ ಅಂಕಗಳ ವ್ಯತ್ಯಾಸವಾಗಿದೆ.
ಶಿಕ್ಷಕರ ತಪ್ಪಿಗೆ ಪೋಷಕರ ವಲಯದಿಂದಲೂ ಆಕ್ರೋಶ ವ್ಯಕ್ತವಾಗಿದೆ. ಶಿಕ್ಷಕರು ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಶಿಕ್ಷಕರು ಚೆಲ್ಲಾಟವಾಗುತ್ತಿರುವುದು ಸರಿಯಲ್ಲ. ಕೂಡಲೇ ಶಿಕ್ಷಕರ ಮೇಲೆ ಕ್ರಮ ಜರುಗಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.
ಅಂಕಗಳ ವ್ಯತ್ಯಾಸವಾಗಿರುವ ಉತ್ತರ ಪತ್ರಿಕೆಗಳನ್ನು ಯಾವ ಶಿಕ್ಷಕರು ಮೌಲ್ಯಮಾಪನ ಮಾಡಿದ್ದಾರೆ ಎಂಬ ಮಾಹಿತಿ ಇಲಾಖೆ ಬಳಿ ಇದೆ. ಸಂಬಂಧಪಟ್ಟಶಿಕ್ಷಕರನ್ನು ಕಪ್ಪುಪಟ್ಟಿಗೆ ಸೇರಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಇಲಾಖೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.