
ಬೆಂಗಳೂರು : ರೈತರ ಸಂಪೂರ್ಣ ಸಾಲಮನ್ನಾ ಮಾಡಿದರೆ ಹಲವು ಕಾರ್ಯಕ್ರಮಗಳಿಗೆ ಅನುದಾನ ಕಡಿತ ಮಾಡಬೇಕಾಗುತ್ತದೆ. ಹೀಗಾಗಿ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸಿಕೊಂಡು ಕೆಲಸ ಮಾಡಬೇಕಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರೈತರ ಸಂಪೂರ್ಣ ಸಾಲ ಮನ್ನಾದಿಂದ ಹಲವು ಕಾರ್ಯಕ್ರಮಗಳಿಗೆ ಅನುದಾನ ಕಡಿಮೆ ಆಗುತ್ತದೆ, ರಾತ್ರೋರಾತ್ರಿ ಕಾರ್ಯಕ್ರಮ ಬದಲಾವಣೆ ಮಾಡಲು ಆಗುವುದಿಲ್ಲ. ರಸ್ತೆ ಅಭಿವೃದ್ಧಿ ಸೇರಿದಂತೆ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಕಷ್ಟವಾಗಲಿದೆ ಎಂದು ಹೇಳಿದರು.
ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ವಾಮಮಾರ್ಗ ಅನುಸರಿಸುವುದು ಸರಿಯಾದ ಕ್ರಮವಲ್ಲ. ಒಂದು ವೇಳೆ ಹಾಗೇನಾದರೂ ಮಾಡಿದರೆ ರಾಜ್ಯದ ಜನತೆಯ ಶಾಪ ತಟ್ಟಲಿದೆ. ಬಿಜೆಪಿ ದೇಶದ ಹಲವು ರಾಜ್ಯಗಳಲ್ಲಿ ನಾನಾ ಮಾರ್ಗಗಳನ್ನು ಬಳಸಿ ಸರ್ಕಾರ ಅಭದ್ರಗೊಳಿಸುವ ಕೆಲಸ ಮಾಡಿಕೊಂಡು ಬಂದಿದೆ. ರಾಜ್ಯದಲ್ಲಿಯೂ ಅದೇ ಕೆಲಸ ಮಾಡುವ ಯೋಜನೆ ರೂಪಿಸಿದ್ದರು. ಆದರೆ, ಅದರಲ್ಲಿ ಯಶಸ್ಸು ಕಾಣಲಿಲ್ಲ. ಬಿಜೆಪಿಯವರು ಪ್ರತಿಪಕ್ಷದಲ್ಲಿ ಕುಳಿತು ಕೆಲಸ ಮಾಡಬೇಕು ಎಂದರು.
ಮಾಜಿ ಸಚಿವ ಎಂ.ಬಿ.ಪಾಟೀಲ್ ನಮ್ಮ ಪಕ್ಷದ ನಾಯಕರಾಗಿದ್ದು, ಒಂದೇ ಪಕ್ಷದ ಇಬ್ಬರು ಭೇಟಿ ಮಾಡುವುದು ಸಹಜ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡುವ ಸಂಬಂಧ ದೆಹಲಿಗೆ ತೆರಳಿದ್ದೆ. ಈ ವೇಳೆ ಎಂ.ಬಿ.ಪಾಟೀಲ್ ಸಹ ದೆಹಲಿಗೆ ಆಗಮಿಸಿದ್ದರು. ಸಹಜವಾಗಿ ಭೇಟಿಯಾಗಿದ್ದೆವು. ಎಂ.ಬಿ.ಪಾಟೀಲ್ ಮತ್ತು ಕೆಲವರು ಸಂಪುಟ ವಿಸ್ತರಣೆಯಾಗಬೇಕು ಎಂಬುದಾಗಿ ತಿಳಿಸಿದ್ದಾರೆ. ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.