
ನವದೆಹಲಿ(ಆ.14): ತಮ್ಮ ಸ್ವಕ್ಷೇತ್ರ ಗೋರಖ್ ಪುರದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 60ಕ್ಕೂ ಹೆಚ್ಚು ಮಕ್ಕಳ ಸರಣಿ ಸಾವಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಣ್ಣೀರಿಟ್ಟಿದ್ದಾರೆ. ಒಂದು ವೇಳೆ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮಕ್ಕಳ ಸಾವು ಸಂಭವಿಸಿದ್ದರೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆದಿತ್ಯನಾಥ್, ಮಕ್ಕಳ ಬಗ್ಗೆ ತಾವು ಸಂವೇದನಾಶೀಲರಾಗಿರುವಷ್ಟು ಯಾರೂ ಇರಲು ಸಾಧ್ಯವಿಲ್ಲ ಎಂದು ಕಣ್ಣೀರು ಸುರಿಸಿದರು.
ಸರ್ಕಾರ ರಚಿಸಿರುವ ಸಮಿತಿಯ ವರದಿ ಬರುವುದನ್ನು ನಾವು ಎದುರು ನೋಡುತ್ತಿದ್ದೇವೆ. ಒಂದು ವೇಳೆ ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದ್ದರೆ, ಘಟನೆಗೆ ಕಾರಣವಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಪೂರ್ವ ಉತ್ತರ ಪ್ರದೇಶದಲ್ಲಿ ಸೊಳ್ಳೆ ಮತ್ತು ಕೀಟಗಳಿಂದ ಹರಡುವ ಮೆದುಳಿನ ಉರಿಯೂತದಂತಹ ಕಾಯಿಲೆಗಳ ವಿರುದ್ಧ ಹೋರಾಡಲು ವೈರಲ್ ರೀಸರ್ಚ್ ಸೆಂಟರ್ ಸ್ಥಾಪನೆಗೆ ಕೇಂದ್ರ ಸರ್ಕಾರದ ನೆರವಿಗೆ ಆದಿತ್ಯನಾಥ್ ಆಗ್ರಹಿಸಿದರು.
ಗೋರಖ್‌ಪುರದಲ್ಲಿ ಸಂಶೋಧನಾ ಕೇಂದ್ರ:
ಇದೇ ವೇಳೆ ಯೋಗಿ ಆದಿತ್ಯನಾಥ್ ಅವರ ಮನವಿಗೆ ಪ್ರತಿಕ್ರಿಯಿಸಿದ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ಗೋರಖ್‌ಪುರದಲ್ಲಿ 85 ಕೋಟಿ ರು. ವೆಚ್ಚದಲ್ಲಿ ಕೇಂದ್ರೀಯ ವೈರಲ್ ರೀಸರ್ಚ್ ಸೆಂಟರ್ ಸ್ಥಾಪನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಸೊಳ್ಳೆ ಮತ್ತು ಕೀಟಗಳಿಂದ ಹರಡುವ ಕಾಯಿಲೆಗಳ ನೈಜ ಸಮಸ್ಯೆಗಳ ಅಧ್ಯಯನಕ್ಕೆ ಸಂಶೋಧನಾ ಕೇಂದ್ರ ನೆರವಾಗಲಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.