
-ಜಿ.ಮಹಾಂತೇಶ್
ಬೆಂಗಳೂರು(ನ.24): ಕರ್ನಾಟಕ ಲೋಕಸೇವಾ ಆಯೋಗ 2011ರಲ್ಲಿ ನಡೆಸಿದ್ದ ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿದ್ದ ತೀರ್ಪನ್ನು ಪ್ರಶ್ನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕರ್ನಾಟಕ ಆಡಳಿತ ನ್ಯಾಯಮಂಡಳಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಯಾ ಅವರು ಅನುಮತಿ ನೀಡಿದ್ದು, ಈ ಸಂಬಂಧ ಅಂತಿಮ ಅನುಮೋದನೆ ಪಡೆಯಲು ಕಡತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಒಂದೆರಡು ದಿನದಲ್ಲಿ ಮುಖ್ಯಮಂತ್ರಿ ಅನುಮೋದಿಸಲಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳು ಖಚಿತಪಡಿಸಿವೆ.
2011ರಲ್ಲಿ ಕೆಪಿಎಸ್‌ಸಿ ನಡೆಸಿದ್ದ ನೇಮಕಾತಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಕರ್ನಾಟಕ ಆಡಳಿತ ನ್ಯಾಯಮಂಡಳಿ ಮೊರೆ ಹೋಗಿದ್ದರು. ರಾಜ್ಯ ಸರ್ಕಾರ ನೀಡಿದ್ದ ಆದೇಶವನ್ನು ರದ್ದುಗೊಳಿಸಿದ್ದ ಕೆಎಟಿ, 362 ಅಭ್ಯರ್ಥಿಗಳಿಗೆ ಕೆಲಸ ಕೊಡುವಂತೆ ಸೂಚನೆ ನೀಡಿತ್ತು. ಅಲ್ಲದೆ, ಅಂತಿಮ ಪಟ್ಟಿಯಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ 2 ತಿಂಗಳೊಳಗೆ ನೇಮಕ ಮಾಡಲು ಆದೇಶಿಸಿತ್ತು.
ಗ್ರೂಪ್ ಎ ಮತ್ತು ಗ್ರೂಪ್ ಬಿ ಶ್ರೇಣಿಯ ಒಟ್ಟು 362 ಹುದ್ದೆಗಳ ನೇಮಕ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗ 2014ರ ಮಾರ್ಚ್ 21ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಈ ಅಂತಿಮ ಪಟ್ಟಿಯ್ಲಿ ಆಯ್ಕೆಯಾಗದ ಅಭ್ಯರ್ಥಿಗಳು ಪಟ್ಟಿ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಅಭ್ಯರ್ಥಿಗಳು ಆರೋಪಿಸಿದ್ದರು. ನಂತರ ಇಡೀ ನೇಮಕಾತಿ ಪ್ರಕ್ರಿಯೆ ಕುರಿತು ಹೆಚ್ಚಿನ ತನಿಖೆ ನಡೆಸಲು ಸಿಐಡಿಗೆ ವಹಿಸಲಾಗಿತ್ತು.
ರಾಜ್ಯಪಾಲರಿಗೆ ಮನವಿ: 1998, 1999 ಮತ್ತು 2004ನೇ ಸಾಲಿನಲ್ಲಿ ಎ ಮತ್ತು ಬಿ ವೃಂದದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ನಡೆದಿದ್ದ ನೇಮಕ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಕೆಪಿಎಸ್‌ಸಿಯ ಈ ಹಿಂದಿನ ಕಾರ್ಯದರ್ಶಿ ಮನೋಜ್‌ಕುಮಾರ್ ಮೀನಾ. ಬಿ.ಎಸ್.ರಾಮಪ್ರಸಾದ್, ಬಿ.ಎ.ಹರೀಶ್‌ಗೌಡ ಸೇರಿದಂತೆ ಅಕ್ರಮ ಫಲಾನುಭವಿಗಳು ಎಂದು ಗುರುತಿಸಲಾಗಿರುವ ಕೆಎಎಸ್ ಅಧಿಕಾರಿಗಳ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅನುಮತಿ ನೀಡಬೇಕು ಎಂದು ಖಲೀಲ್ ಅಹ್ಮದ್ ಮತ್ತು ಇತರರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.
ಈ ಮೂರೂ ಬ್ಯಾಚ್‌ಗಳಲ್ಲಿ ನಡೆದಿದ್ದ ನೇಮಕ ಪ್ರಕ್ರಿಯೆ ಸಂಪೂರ್ಣ ಅಸಂವಿಧಾನಿಕ ಎಂದು ಹೈಕೋರ್ಟ್ ನೀಡಿದ್ದ ತೀರ್ಪುನ್ನು ಪ್ರಶ್ನಿಸಿ ಬಾಧಿತ ಅಧಿಕಾರಿಗಳು ಮತ್ತು ಕೆಪಿಎಸ್‌ಸಿ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿರುವ ಬೆನ್ನಲ್ಲೇ ಖಲೀಲ್ ಅಹ್ಮದ್ ಮತ್ತು ಇತರರು ಮುಖ್ಯ ಕಾರ್ಯದರ್ಶಿ, ರಾಜ್ಯಪಾಲರಿಗೆ ಈ ಮನವಿ ಸಲ್ಲಿಸಿದ್ದಾರೆ.
ಅರ್ಜಿ ಸಲ್ಲಿಸಿದ 3 ತಿಂಗಳೊಳಗೆ ಮುಖ್ಯ ಕಾರ್ಯದರ್ಶಿಗಳು ಮೊಕದ್ದಮೆ ದಾಖಲಿಸಲು ಅನುಮತಿ ನೀಡದಿದ್ದಲ್ಲಿ ಮೊಕದ್ದಮೆ ದಾಖಲಿಸಲು ಅನುಮತಿ ನೀಡಲಾಗಿದೆ ಎಂದು ಭಾವಿಸಿ ಅರ್ಜಿದಾರರೇ ಸ್ವಯಂ ಪ್ರೇರಿತರಾಗಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲು ಹಕ್ಕು ಹೊಂದಿದ್ದಾರೆ.
ಈ ಪ್ರಕರಣ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್, ಆಯ್ಕೆಯಾದ ಅಧಿಕಾರಿಗಳ ವಿರುದ್ಧ ವೈಯಕ್ತಿಕವಾಗಿ ದೂರುಗಳಿದ್ದ ಪಕ್ಷದಲ್ಲಿ ಸಕ್ಷಮ ನ್ಯಾಯಾಲಯಗಳಲ್ಲಿ ಬಗೆಹರಿಸಿಕೊಳ್ಳಲು ಅರ್ಜಿದಾರರಿಗೆ ಸ್ವಾತಂತ್ರ್ಯ ನೀಡಿರುತ್ತೆ. ಹೈಕೋರ್ಟ್ ನೀಡಿರುವ ಈ ತೀರ್ಪನ್ನು ಉಲ್ಲೇಖಿಸಿರುವ ಅರ್ಜಿದಾರರು, ಸಿಆರ್‌ಪಿಸಿ ಸೆಕ್ಷನ್ 197 ಪ್ರಕಾರ ಅಕ್ರಮ ಫಲಾನುಭವಿಗಳು ಎಂದು ಗುರುತಿಸಲಾಗಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅನುಮತಿ ನೀಡಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.