
ಬೆಂಗಳೂರು[ಮೇ.08]: ಜೀವನದಲ್ಲಿ ಜಿಗುಪ್ಸೆಗೊಂಡು ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಅಕ್ಷಯ ನಗರದಲ್ಲಿ ಮಂಗಳವಾರ ನಡೆದಿದೆ.
ಗುತ್ತಿಗೆದಾರ ಶ್ರೀನಿವಾಸಮೂರ್ತಿ ದಂಪತಿ ಪುತ್ರಿ ಲೀನಾ (17) ಮೃತ ದುರ್ದೈವಿ. ಮನೆಯಲ್ಲಿ ಮಧ್ಯಾಹ್ನ 3.30ರ ಸುಮಾರಿಗೆ ಲೀನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲ ಹೊತ್ತಿನ ಬಳಿಕ ಮೃತಳ ಸ್ನೇಹಿತೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಮೃತ ಲೀನಾ, ತಮ್ಮ ಮನೆ ಹತ್ತಿರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆಯ ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಮೃತಳ ಕೊಠಡಿಯಲ್ಲಿ ಮರಣ ಪತ್ರ ಪತ್ತೆಯಾಗಿದ್ದು, ಇದರಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ತಮ್ಮ ಮಗಳಿಗೆ ಪ್ರೀತಿಸುವಂತೆ ಆಕೆಯ ಬಾಲ್ಯದ ಗೆಳೆಯ ಮಂಜುನಾಥ್ ಎಂಬಾತ ತೊಂದರೆ ಕೊಡುತ್ತಿದ್ದ. ಈ ಕಿರುಕುಳ ಸಹಿಸಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿಗೆ ಕಾರಣನಾದ ಆತನ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಬೇಕು ಎಂದು ಲೀನಾ ಪೋಷಕರು ದೂರು ನೀಡಿದ್ದಾರೆ. ಅದರನ್ವಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ರಾಮಮೂರ್ತಿ ನಗರ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.