
ನವದೆಹಲಿ: ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಪ್ರಧಾನಿ ಮೋದಿ ಗೋರಕ್ಷಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಕಾನೂನನ್ನು ಕೈಗೆತ್ತಿ ಕೊಳ್ಳುವ ಅವಕಾಶ ಯಾರಿಗೂ ಇಲ್ಲವೆಂದಿರುವ ಪ್ರಧಾನಿ, ಸ್ವಘೋಷಿತ ಗೋರಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಇಂದು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ಮೋದಿ, ಸ್ವಘೋಷಿತ ಗೋರಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆಂದು, ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
ಗೋರಕ್ಷಣೆ ಹೆಸರಿನಲ್ಲಿ ಕಾನೂನು ಉಲ್ಲಂಘಿಸುತ್ತಿರುವವರ ವಿರುದ್ಧ ರಾಜ್ಯ ಸರ್ಕಾರಗಳು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು; ಯಾವುದೇ ವ್ಯಕ್ತಿ ಯಾ ಸಂಘಟನೆಗಳಿಗೆ ಕಾನೂನು ಕೈಗೆತ್ತಿಕೊಳ್ಳುವ ಅವಕಾಶವಿಲ್ಲವೆಂದು ಪ್ರಧಾನಿ ಹೇಳಿದ್ದಾರೆ, ಎಂದು ಅನಂತ್ ಕುಮಾರ್ ತಿಳಿಸಿದ್ದಾರೆ.
ಗೋವು ಹಾಗೂ ಗೋಮಾಂಸ ಸಾಗಾಟದ ಆರೋಪದಲ್ಲಿ ವ್ಯಕ್ತಿಗಳನ್ನು ಥಳಿಸಿ ಹತ್ಯೆಗೈಯುತ್ತಿರುವ ಘಟನೆಗಳು ದೇಶದಲ್ಲಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಈ ಹಿಂದೆಯೂ ಅಸಮಾಧಾನ ವ್ಯಕ್ತಪಡಿಸಿದ್ದರು.
ಗೋರಕ್ಷಣೆಗೆ ದೇಶದಲ್ಲಿ ಕಾನೂನು ಇದೆ. ಆದರೆ ಅದಕ್ಕಾಗಿ ಅಪರಾಧ ಕೃತ್ಯವನ್ನು ನಡೆಸುವುದನ್ನು ಸಹಿಸಲು ಸಾಧ್ಯವಿಲ್ಲವೆಂದು ಮೋದಿ ಹೇಳಿದ್ದಾರೆ.
ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಕೃತ್ಯಕ್ಕೆ ಧಾರ್ಮಿಕ ಅಥವಾ ರಾಜಕೀಯ ಬಣ್ಣ ಬಳಿಯುವುದು ಬೇಡ, ಅದರಿಂದ ದೇಶಕ್ಕೆ ಯಾವುದೇ ಪ್ರಯೋಜನವಿಲ್ಲ. ಪ್ರತಿಯೊಬ್ಬರು ಜತೆ ಸೇರಿ ಆ ಚಾಳಿಗೆ ಅಂತ್ಯಹಾಡಬೇಕಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.