ರಾಜ್ಯಕ್ಕೆ ಅಪ್ಪಳಿಸಲಿದೆ ಚಂಡಮಾರುತ : ಎಲ್ಲೆಲ್ಲಿ ಭಾರೀ ಮಳೆ?

By Web DeskFirst Published Sep 21, 2018, 8:20 AM IST
Highlights

 ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿಯೂ ಚಂಡಮಾರುತ ಅಪ್ಪಳಿಸಲಿದೆ. ಇದರಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು :  ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತ ಚಂಡಮಾರುತದ ರೂಪ ಪಡೆದುಕೊಳ್ಳಲಿದ್ದು, ಆಂಧ್ರಪ್ರದೇಶ ಹಾಗೂ ಒಡಿಶಾಕ್ಕೆ ಬಂದು ಅಪ್ಪಳಿಸಲಿದೆ. ಆಂಧ್ರಪ್ರದೇಶ ಹಾಗೂ ಒಡಿಶಾದಲ್ಲಿ ಭಾರೀ ಮಳೆಯಾಗಲಿದೆ. ಬಳಿಕ ಚಂಡಮಾರುತದ ತೀವ್ರತೆ ಕಡಿಮೆಯಾಗಲಿದೆ. ಇದರ ಪರಿಣಾಮ ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಾದ ಗದಗ, ಯಾದಗಿರಿ, ಕಲಬುರಗಿ ಸೇರಿದಂತೆ ಕರಾವಳಿಯ ಜಿಲ್ಲೆಗಳಲ್ಲೂ ಮೂರ್ನಾಲ್ಕು ದಿನ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಹೆಚ್ಚಿನ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಆದರೆ, ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿಲ್ಲ ಎಂದು ಹವಾಮಾನ ಇಲಾಖೆ ನಿರ್ದೇಶಕ ಚನ್ನಬಸಪ್ಪ ಎಸ್‌. ಪಾಟೀಲ್‌ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

ಗುರುವಾರವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಅತಿ ಹೆಚ್ಚು ಶಿವಮೊಗ್ಗ ಜಿಲ್ಲೆಯಲ್ಲಿ 84.5 ಮಿ.ಮೀ. ಮಳೆಯಾಗಿದೆ. ಕೊಪ್ಪಳದಲ್ಲಿ 50.5, ಬೆಳಗಾವಿ ಮತ್ತು ಧಾರವಾಡದಲ್ಲಿ 40, ದಾವಣಗೆರೆ 33, ಬಳ್ಳಾರಿ 30.2, ವಿಜಯಪುರ 27.5, ಬೆಂಗಳೂರು 25.5 ಹಾಗೂ ಗದಗದಲ್ಲಿ 20.5 ಮಿ.ಮೀ. ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

click me!