
ಬೆಂಗಳೂರು (ಸೆ.23): ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಶೀಘ್ರದಲ್ಲಿ ಸರ್ಕಾರದ ನಿಲುವು ತಿಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡಿರುವ ಕ್ರಮ ಪ್ರಶ್ನಿಸಿ ಬಾಲಚಂದ್ರ ವಿಘ್ನೇಶ್ವರ್ ದೀಕ್ಷಿತ್ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ, ದೇವಾಲಯವು ಸಾರ್ವಜನಿಕರಿಗೆ ಸೇರಿದೆ. ಆದರೆ ಇದನ್ನು 2008ರಲ್ಲಿ ಅಂದಿನ ರಾಜ್ಯ ಸರ್ಕಾರ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿದೆ. ಸಾರ್ವಜನಿಕರ ಈ ಮಠವನ್ನು ಈಗ ಖಾಸಗಿಯವರ ಸುಪರ್ದಿಗೆ ಒಪ್ಪಿಸಿರುವುದು ಕಾನೂನು ಬಾಹಿರ. ಈ ಬಗ್ಗೆ ಸಾಕಷ್ಟುದೂರು ನೀಡಿದರೂ ಏನೂ ಪ್ರಯೋಜನವಾಗಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಈ ಸಂದರ್ಭದಲ್ಲಿ ಹಾಜರಿದ್ದ ಅಡ್ವೊಕೇರ್ಟ್ ಜನರಲ್ ಎಂ.ಆರ್.ನಾಯಕ್, ಈ ಸಂಬಂಧ ಅಂದಿನ ಸರ್ಕಾರ ನಿರ್ಧಾರ ಕೈಗೊಂಡಿದೆ. ಈಗಾಗಲೇ ಈ ಕುರಿತು ರಾಜ್ಯಪಾಲರಿಗೆ ಹಾಗೂ ಸರ್ಕಾರಕ್ಕೆ ಅನೇಕ ದೂರುಗಳು ಬಂದಿವೆ. ಎಲ್ಲವನ್ನೂ ಸರ್ಕಾರ ಪರಿಶೀಲಿಸುತ್ತಿದೆ. ಅಂತಿಮ ನಿರ್ಧಾರ ತಿಳಿಸಲು ಇನ್ನೆರಡು ತಿಂಗಳ ಸಮಯಾವಕಾಶ ಬೇಕು ಎಂದು ಕೋರಿದರು.
ಪ್ರಕರಣ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಗೋಕರ್ಣ ಕ್ಷೇತ್ರದಲ್ಲಿರುವ ಮಹಾಬಲೇಶ್ವರ ದೇವಾಲಯವನ್ನು 2008ರ ಆಗಸ್ಟ್‌ನಲ್ಲಿ ಅಂದಿನ ಬಿಜೆಪಿ ಸರ್ಕಾರ ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರು ಗೋಕರ್ಣ ದೇವಾಲಯ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಕಾಯ್ದೆ 1997ಕ್ಕೆ ಒಳಪಡುತ್ತದೆ. ಈ ಹಿನ್ನೆಲೆಯಲ್ಲಿ ಅದನ್ನು ಹಸ್ತಾಂತರ ಮಾಡಿರುವುದು ಸರಿಯಲ್ಲ. ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.