ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು [ಜು.23]: ಉತ್ತರ ಒಳನಾಡಿನಲ್ಲಿಯೂ ಮುಂಗಾರು ಚುರುಕುಗೊಂಡಿದ್ದು ಜು.27ವರೆಗೆ ರಾಜ್ಯದಲ್ಲಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಂದು ವಾರದಿಂದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದೀಗ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಮುಂಗಾರು ಚುರುಕುಗೊಂಡಿದ್ದು, ಒಟ್ಟಾರೆ ವಾರಾಂತ್ಯದವರೆಗೆ ರಾಜ್ಯಾದ್ಯಂತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಶನಿವಾರದವರೆಗೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.