
ಜೈಪುರ : ಪಂಚರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭದ್ರಕೋಟೆಗಳೇ ಕಾಂಗ್ರೆಸ್ ವಶವಾಗಿವೆ. ಛತ್ತೀಸ್ ಗಢ, ಮಧ್ಯ ಪ್ರದೇಶ, ರಾಜಸ್ಥಾನಗಳಲ್ಲಿ ಈಗಾಗಲೇ ಕಾಂಗ್ರೆಸ್ ಅಧಿಕಾರ ಸ್ವೀಕಾರ ಮಾಡಿವೆ.
ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಮುಖ್ಯಮಂತ್ರಿಯಾಗಿದ್ದು, ರಾಜಸ್ಥಾನದಲ್ಲಿ ಶೋಖ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿ ಹಾಗೂ ಸಚಿನ್ ಪೈಲಟ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಎಂದಿಗೂ ಕೂಡ ವೈರಿಗಳಂತೆ ವರ್ತಿಸುವ 2 ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಕಾಂಗ್ರೆಸ್ ಮುಖಂಡರು ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಒಂದಾಗಿದ್ದಾರೆ.
ಜೈಪುರದ ಅಲ್ಬರ್ಟ್ ಹಾಲ್ ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ ಅಧಿಕಾರ ಸ್ವೀಕರಿಸಿದ್ದು, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಪಾಲ್ಗೊಂಡು ಅಭಿನಂದಿಸಿದ್ದಾರೆ. ಅಲ್ಲದೇ ಇದೇ ವೇಳೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಪೈಲಟ್ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೂ ರಾಜೆ ತಮ್ಮ ಅಭಿನಂದನೆ ತಿಳಿಸಿದ್ದಾರೆ.
ರಾಜಸ್ಥಾನ ಬಿಜೆಪಿ ನಾಯಕಿ ವಸುಂಧರಾ ರಾಜೇ, ಸಮಾರಂಭಕ್ಕೆ ಆಗಮಿಸಿದ್ದ ಕಾಂಗ್ರೆಸ್ ಸಂಸದ ಹಾಗೂ ಮಧ್ಯಪ್ರದೇಶ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾಗೂ ಅಭಿನಂದನೆ ತಿಳಿಸುವ ಮೂಲಕ ಸಾಮರಸ್ಯ ಮೆರೆದಿದ್ದಾರೆ. ಇಬ್ಬರೂ ರಾಜಮನೆತನಕ್ಕೆ ಸೇರಿದವರಾಗಿದ್ದು, ವಸುಂಧರಾ ರಾಜೇ ಜ್ಯೋತಿರಾದಿತ್ಯ ಸಿಂಧಿಯಾರ ಅತ್ತೆ.
ಇನ್ನು ಮಧ್ಯ ಪ್ರದೇಶದಲ್ಲಿಯೂ ಕಮಲನಾಥ್ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪಾಲ್ಗೊಂಡಿದ್ದರು. ಈ ಮೂಲಕ ರಾಜಕೀಯದಲ್ಲಿ ಬದ್ಧ ವೈರಿಗಳಂತೆ ಇದ್ದರೂ ತಮ್ಮ ಆತ್ಮೀಯತೆಯನ್ನು ಮರೆಯದೇ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಸಾಮರಸ್ಯ ಮೆರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.