
ಮೈಸೂರು, [ಆ.04]: 2018ರ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಚುನಾವಣೆಯಲ್ಲಿ ಅಂದಿನ ಹಾಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಿ ಫೇಮಸ್ ಆಗಿದ್ದ ಜಿ.ಟಿ.ದೇವೇಗೌಡ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ರಾಜಕೀಯ ಹಾರಾಟ ನಿಲ್ಲಿಸಿದ 'ಹಳ್ಳಿ ಹಕ್ಕಿ'
ಇಂದು [ಭಾನುವಾರ] ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಜಿ.ಟಿ.ದೇವೇಗೌಡ್ರು ರಾಜಕೀಯ ನಿವೃತ್ತಿ ಹೇಳಿದರು. ಇನ್ನು ಜಿ.ಟಿ.ಡಿ ಸುದ್ದಿಗೋಷ್ಠಿಯನ್ನು ಸೂಕ್ಷ್ಮವಾಗಿ ಗಮನಿಸಿದ್ರೆ, ಅವರು ತಮ್ಮ ಇಡೀ ಸುದ್ದಿಗೋಷ್ಠಿಯಲ್ಲಿ ಪರೋಕ್ಷವಾಗಿ ಜೆಡಿಎಸ್ ಪಕ್ಷದ ವಿರುದ್ಧ ಬೇಸದ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ ಅವರು ಏನೆಲ್ಲ ಮಾತನಾಡಿದ್ದಾರೆ ಎನ್ನುವುದು ಈ ಕೆಳಗಿನಂತಿದೆ.
ಇದು ನನ್ನ ಕೊನೆಯ ಚುನಾವಣೆ. ಮುಂದಿನ ಚುನಾವಣೆಯಲ್ಲಿ ಸ್ಪರ್ದಿಸುವುದಿಲ್ಲ ಎಂದು ಹೇಳುವ ಮೂಲಕ ರಾಜಕೀಯಕ್ಕೆ ಗುಡ್ ಬೈ ಹೇಳಿದರು. ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕು. ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ಮುಂದಿನ ಚುನಾವಣೆಯಲ್ಲಿ ನಿಲ್ಲುವುದಿಲ್ಲ ಎಂದು ಹೇಳಿ ಬಂದಿದ್ದೇನೆ. ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ದೇವರೆಂದು ಭಾವಿಸಿ ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಹೇಳಿದರು.
ಚುನಾವಣೆ ನೋವು ಏನು ಎನ್ನುವುದು ನನಗೆ ಮಾತ್ರ ಗೊತ್ತು. ಇನ್ನುಳಿದ ಮೂರೂವರೆ ವರ್ಷ ಕ್ಷೇತ್ರದ ಜನರ ಜತೆ ಇರುತ್ತೇನೆ. ನನ್ನ ಜನರಿಗೆ ಒಂದು ಥ್ಯಾಂಕ್ಸ್ ಹೇಳೋಕೆ ಆಗಿಲ್ಲ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ಯಾರ ಹಂಗಿನಲ್ಲೂ ಬದುಕಿಲ್ಲ. ನನಗೆ ಯಾವುದೇ ರಾಜಕೀಯ ಗುರುಗಳಿಲ್ಲ. ಕುಮಾರಸ್ವಾಮಿ, ದೇವೇಗೌಡ, ಸಿದ್ದರಾಮಯ್ಯ ಯಾರಿಂದಲೂ ಸಹಾಯವಾಗಿಲ್ಲ. ಚುನಾವಣೆಗಳಿಗಾಗಿ ಜೆಡಿಎಸ್‌ನಿಂದ ಒಂದು ರೂಪಾಯಿ ಹಣ ಪಡೆದಿಲ್ಲ. ನನ್ನ ಸ್ವಂತ ಹಣದಿಂದ ಎಲ್ಲವನ್ನೂ ಮಾಡಿದ್ದೇನೆ ಎಂದರು.
ನನಗೆ ಮೈತ್ರಿ ಸರ್ಕಾರದಲ್ಲಿ ಉನ್ನತ ಶಿಕ್ಷಣ ಖಾತೆ ಬೇಡ ಎಂದು ಒಂದು ತಿಂಗಳು ದೂರ ಸರಿದಿದ್ದೆ. ನನಗಿಷ್ಟವಾದ ಖಾತೆ ಸಿಗಲಿಲ್ಲ. ಹೇಳುತ್ತಾ ಹೋದರೆ ಸಾಕಷ್ಟಿದೆ ಎಂದು ಜೆಡಿಎಸ್ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ಒಟ್ಟಿನಲ್ಲಿ ಇಡೀ ಸುದ್ದಿಗೋಷ್ಠಿಯಲ್ಲಿ ಪರೋಕ್ಷವಾಗಿ ಜೆಡಿಎಸ್ ವಿರುದ್ಧ ಅಸಮಾಧಾನ ಹೊರಹಾಕಿರುವುದು ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.