ಜಯನಗರ ಕಣದಿಂದ ಹಿಂದೆ ಸರಿದ ಜೆಡಿಎಸ್‌: ಕೈಗೆ ಬೆಂಬಲ

First Published Jun 6, 2018, 9:48 AM IST
Highlights

ತ್ರಿಕೋನ ಸ್ಪರ್ಧೆಗೆ ಸಜ್ಜಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ನಡೆಯಲಿದೆ. ಜೆಡಿಎಸ್‌ ಅಭ್ಯರ್ಥಿ ಕಾಳೇಗೌಡ ಅವರು ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಬೆಂಗಳೂರು :  ತ್ರಿಕೋನ ಸ್ಪರ್ಧೆಗೆ ಸಜ್ಜಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ನಡೆಯಲಿದೆ. ಜೆಡಿಎಸ್‌ ಅಭ್ಯರ್ಥಿ ಕಾಳೇಗೌಡ ಅವರು ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಕಳೆದ ವಾರ ನಡೆದ ರಾಜರಾಜೇಶ್ವರಿನಗರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವೆ ಹೊಂದಾಣಿಕೆ ಯಶಸ್ವಿಯಾಗಿರಲಿಲ್ಲ. ಆ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನು ಹಿಂಪಡೆಯಲು ಜೆಡಿಎಸ್‌ ನಾಯಕರು ನಿರಾಕರಿಸಿದ್ದರು. ಆದರೆ, ಜಯನಗರಕ್ಕೆ ಸಂಬಂಧಿಸಿದಂತೆ ತಮ್ಮ ಬಿಗಿಪಟ್ಟು ಸಡಿಲಿಸಿದ ಜೆಡಿಎಸ್‌ ನಾಯಕರು ಅಭ್ಯರ್ಥಿಯನ್ನು ಕಣದಿಂದ ಹಿಂದೆ ಕರೆಸುವ ಬಗ್ಗೆ ನಿರ್ಧಾರ ಕೈಗೊಂಡರು.

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಸೌಮ್ಯಾರೆಡ್ಡಿ ಅವರಿಗೆ ಜೆಡಿಎಸ್‌ ಬೆಂಬಲ ಘೋಷಣೆ ಮಾಡಿರುವ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ಮಂಗಳವಾರ ಅಧಿಕೃತವಾಗಿ ಆದೇಶ ಹೊರಡಿಸಿದರು. ಅಲ್ಲದೇ, ಕಾಂಗ್ರೆಸ್‌ ಪರವಾಗಿ ಕ್ಷೇತ್ರದಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಪ್ರಚಾರದಲ್ಲಿ ತೊಡಗಿ ಗೆಲುವಿಗೆ ಶ್ರಮಿಸಬೇಕು ಎಂದು ಸೂಚನೆ ನೀಡಿದರು.

ಜೆಡಿಎಸ್‌ ಕಣದಿಂದ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್‌ನ ನಡುವೆ ನೇರ ಸ್ಪರ್ಧೆ ಉಂಟಾಗಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವಿಜಯಕುಮಾರ್‌ ನಿಧನರಾದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮೇ 12ರಿಂದ ಜೂ.11ಕ್ಕೆ ಮುಂದೂಡಲಾಗಿತ್ತು. ಬಿಜೆಪಿ ಅಭ್ಯರ್ಥಿಯಾಗಿ ವಿಜಯ್‌ಕುಮಾರ್‌ ಅವರ ಸಹೋದರ ಪ್ರಹ್ಲಾದ್‌ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್‌ನಿಂದ ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿ ಕಣಕ್ಕಿಳಿದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ರವಿಕೃಷ್ಣಾರೆಡ್ಡಿ ಸ್ಪರ್ಧಿಸಿದ್ದಾರೆ.

ಕಾಂಗ್ರೆಸ್‌ಗೆ ಬೆಂಬಲ ನೀಡುವ ಕುರಿತು ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ರಾಮಲಿಂಗಾರೆಡ್ಡಿ ಅವರಿಗೆ ಭರವಸೆ ನೀಡಿದರು. ಮಂಗಳವಾರ ಮಧ್ಯಾಹ್ನ ರಾಮಲಿಂಗಾ ರೆಡ್ಡಿ ಅವರು ಪದ್ಮಾನಭನಗರ ನಿವಾಸಕ್ಕೆ ತೆರಳಿ ಬೆಂಬಲದ ಕುರಿತು ಮಾತುಕತೆ ನಡೆಸಿದರು. ಚರ್ಚೆ ವೇಳೆ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಉಪಸ್ಥಿತರಿದ್ದರು.

click me!