
ಬೆಂಗಳೂರು: ಏಪ್ರಿಲ್, ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಸುವುದು ಸೂಕ್ತ ವಾಗಿದ್ದು, ಅದಕ್ಕೆ ಬೇಕಾದ ಸಿದ್ಧತೆ ಕೈಗೊಳ್ಳಲು ನಾವು ಸಿದ್ಧರಿದ್ದೇವೆ ಎಂಬ ಅಭಿಪ್ರಾಯವನ್ನು ರಾಜ್ಯ ಚುನಾವಣಾಧಿಕಾರಿಗಳು ಕೇಂದ್ರ ಆಯೋಗಕ್ಕೆ ಸಲ್ಲಿಸಿದ್ದಾರೆ. ಇದಕ್ಕೆ ಕೇಂದ್ರ ಆಯೋಗ ಸಮ್ಮತಿಸಿದರೆ ಒಂದೇ ಹಂತದ ಮತದಾನ ನಡೆಯಲಿದೆ.
ಬೇಸಿಗೆಯ ವೇಳೆಗೆ ಜರುಗಬೇಕಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಒಂದೇ ಹಂತದಲ್ಲಿ ನಡೆಯಲಿದೆಯೇ ಎಂಬ ಕುತೂಹಲ ಮೂಡಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸುವುದು ಸೂಕ್ತವಾಗಿದ್ದು, ಅದಕ್ಕೆ ಬೇಕಾದ ಸಿದ್ಧತೆ ಕೈಗೊಳ್ಳಲು ನಾವು ಸಿದ್ಧರಿದ್ದೇವೆ ಎಂಬ ಅಭಿಪ್ರಾಯವನ್ನು ರಾಜ್ಯ ಚುನಾವಣಾಧಿಕಾರಿಗಳು ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದಾರೆ. ಹೀಗಾಗಿ, ರಾಜ್ಯ ಚುನಾವಣಾಧಿಕಾರಿಗಳ ಅಭಿಪ್ರಾಯವನ್ನು ಒಪ್ಪಿಕೊಂಡಲ್ಲಿ ಒಂದೇ ಹಂತದ ಮತದಾನ ನಡೆಯುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಸಾಮಾನ್ಯವಾಗಿ ಎರಡು ಹಂತಗಳಲ್ಲಿ ಚುನಾವಣೆ ನಡೆಯುವುದರಿಂದ ಈ ಬಾರಿ ಒಂದೇ ಹಂತದಲ್ಲಿ ನಡೆಯುವುದೇ ಎಂಬ ಕುತೂಹಲ ರಾಜ್ಯ ರಾಜಕಾರಣದಲ್ಲಿ ಗರಿಗೆದರಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್, ರಾಜ್ಯದಲ್ಲಿ ಈ ಬಾರಿ ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.
ಒಂದೇ ಹಂತದ ಚುನಾವಣೆ ನಡೆಸಲು ನಾವು ಸಿದ್ಧರಿದ್ದೇವೆ. ನಮಗೆ ಆ ಸಾಮರ್ಥ್ಯವೂ ಇದೆ. ಯಾವುದೇ ರಾಜಕೀಯ ಪಕ್ಷ ಎರಡು ಹಂತಗಳಲ್ಲಿ ಚುನಾವಣೆ ನಡೆಸಬೇಕು ಎಂಬ ಮನವಿ ಸಲ್ಲಿಸಿಲ್ಲ. ಆದರೆ, ಈ ವಿಷಯದಲ್ಲಿ ರಾಜ್ಯ ಚುನಾವಣಾ ಕಾರ್ಯಾಲಯ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಕೇಂದ್ರ ಚುನಾವಣಾ ಆಯೋಗವೇ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು. ಕೇಂದ್ರ ಚುನಾವಣಾ ಆಯೋಗದ ತಂಡ 2 ದಿನ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.