ಸರ್ಕಾರ ಉಳಿಸಲು ಸಿಎಂ ಕುಮಾರಸ್ವಾಮಿ ಪ್ರಯತ್ನ

By Web DeskFirst Published May 6, 2019, 7:37 AM IST
Highlights

ಸಮ್ಮಿಶ್ರ  ಸರ್ಕಾರದ ಭವಿಷ್ಯದ ಬಗ್ಗೆ ಹಲವು ರೀತಿಯ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಸರ್ಕಾರ ಉಳಿಸುವ ಯತ್ನದಲ್ಲಿ ತೊಡಗಿದ್ದಾರೆ. 

ಬೆಂಗಳೂರು:  ಸಮ್ಮಿಶ್ರ ಸರ್ಕಾರದ ಭವಿಷ್ಯದ ಬಗ್ಗೆ ನಾನಾ ರೀತಿಯ ವದಂತಿಗಳು ಬಲವಾಗಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಶಾಸಕರನ್ನು ಮಾತುಕತೆ ಮೂಲಕ ಮನವೊಲಿಸುವ ಪ್ರಯತ್ನಕ್ಕೆ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಾಗಲಿದ್ದಾರೆ. 

ಮಂಗಳವಾರ ಬಸವ ಜಯಂತಿ. ಅದರ ಮಾರನೇ ದಿನದಿಂದ ಸಾಧ್ಯವಾದಷ್ಟು ಉಭಯ ಪಕ್ಷಗಳ ಶಾಸಕರಿಗೆ ಸಮಯ ಕೊಟ್ಟು ಅವರ ಕ್ಷೇತ್ರದ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮುಖಾಮುಖಿಯಾಗಿ ಚರ್ಚಿಸುವ ಇಂಗಿತವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆ ನಂತರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಬಗ್ಗೆ ಪ್ರಸ್ತಾಪವಾಗಿತ್ತು.

ಆ ವೇಳೆಯಲ್ಲಿಯೇ ಮುಖ್ಯಮಂತ್ರಿಗಳು ತಾವು ದಕ್ಷಿಣ ಕನ್ನಡ ಜಿಲ್ಲೆಯ ಕಾಪುಗೆ ತೆರಳಿ ಆಯುರ್ವೇದ ಚಿಕಿತ್ಸೆ ಪಡೆದು ವಾಪಸಾಗುತ್ತೇನೆ. ಬಸವ ಜಯಂತಿ ನಂತರ ಶಾಸಕರೊಂದಿಗೆ ಮಾತುಕತೆ ನಡೆಸುತ್ತೇನೆ ಎಂಬ ಮಾತನ್ನು ಆ ಸಭೆಯಲ್ಲಿ ಹೇಳಿದ್ದರು ಎಂದು ಮೂಲಗಳು ತಿಳಿಸಿವೆ.

ಆ ಪ್ರಕಾರ, ಕುಮಾರಸ್ವಾಮಿ ಅವರು ಇದೀಗ ಆಯುರ್ವೇದ ಚಿಕಿತ್ಸೆ ಪಡೆದು ವಾಪಸಾಗಿದ್ದರಿಂದ ದಿನನಿತ್ಯದ ಆಡಳಿತ ಚಟುವಟಿಕೆಗಳನ್ನು ಎಂದಿನಂತೆ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿರುವುದರಿಂದ ಅವರನ್ನು ವಿಶ್ವಾಸಕ್ಕೆ ಪಡೆದುಕೊ ಳ್ಳುವ ಪ್ರಯತ್ನ ಮತ್ತೆ ಆರಂಭಿಸಲಿದ್ದಾರೆ ಎನ್ನಲಾಗಿದೆ.  

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಹಿಂದೆಯೂ ಅಸಮಾಧಾನಿತ ಶಾಸಕರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿ ಮನ ವೊಲಿಸುವ ಪ್ರಯತ್ನ ಮಾಡಿದ್ದರು. ರಮೇಶ್ ಜಾರಕಿಹೊಳಿ, ಶ್ರೀಮಂತ್ ಪಾಟೀಲ, ಮಹೇಶ್ ಕುಮಟಳ್ಳಿ ಮತ್ತಿತರರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿಯೇ ರಮೇಶ್ ಜಾರಕಿಹೊಳಿ ಅವರನ್ನು ಹೊರತುಪಡಿಸಿ ಇತರ ಶಾಸಕರು ತಾವು ಪಕ್ಷ ತೊರೆಯುವುದಿಲ್ಲ ಎಂಬ ಮಾತನ್ನು ಹೇಳಿದ್ದರು. ಇದೀಗ ಬೆಂಗಳೂರಿನ ಕಾಂಗ್ರೆಸ್ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ಟಿ.ಸೋಮಶೇಖರ್ ಅವರು ಬಹಿರಂಗವಾಗಿಯೇ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದರಿಂದ ಅವರನ್ನೂ ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸುವ ಸಾಧ್ಯತೆಯಿದೆ. 

ಇದಕ್ಕೆ ಪೂರಕವಾಗಿ ಎಂಬಂತೆ ಭಾನುವಾರ ತಮ್ಮನ್ನು ಭೇಟಿ ಮಾಡಿದ್ದ ಬಿಡಿಎ ಆಯುಕ್ತ ರಾಕೇಶ್ ಸಿಂಗ್ ಅವರೊಂದಿಗೆ ಮಾಹಿತಿ ಪಡೆದುಕೊಂಡಿದ್ದಾರೆ. ಅತೃಪ್ತ ಶಾಸಕರನ್ನು ಒಬ್ಬೊಬ್ಬರನ್ನಾಗಿ ಅಥವಾ ಗುಂಪಾಗಿ ಭೇಟಿ ಮಾಡುವ ಮೂಲಕ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

click me!