ಕೆಎಂಎಫ್‌ ಅಧ್ಯಕ್ಷರ ಚುನಾವಣೆ ಡೇಟ್ ಫಿಕ್ಸ್

By Web DeskFirst Published Aug 23, 2019, 9:06 AM IST
Highlights

ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿ ಮಾಡಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಬೆಂಗಳೂರು [ಆ.23]: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ಅಧ್ಯಕ್ಷ ಸ್ಥಾನಕ್ಕೆ ಆಗಸ್ಟ್‌ 31ರಂದು ಚುನಾವಣೆ ನಡೆಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಕೆಎಂಎಫ್‌ ಅಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಿ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಹಾಗೂ ಕೂಡಲೇ ಚುನಾವಣಾ ಪ್ರಕ್ರಿಯೆ ಮುಂದುವರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಶಾಸಕ ಎಚ್‌.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿಯು ಗುರುವಾರ ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಅವರಿದ್ದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ, ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಆ.31ರಂದು ಚುನಾವಣೆ ನಡೆಸಲಾಗುತ್ತದೆ. ಈ ಹಿಂದೆ ಯಾವ ಹಂತದಲ್ಲಿ ಚುನಾವಣಾ ಪ್ರಕ್ರಿಯೆ ಸ್ಥಗಿತಗೊಂಡಿತ್ತೋ ಅದೇ ಹಂತದಿಂದ ಪ್ರಕ್ರಿಯೆಗಳು ಮುಂದುವರಿಯಲಿವೆ. ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ ಎಂದು ವಿವರಿಸಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿ ಇತ್ಯರ್ಥಪಡಿಸಿತು.

ಕೆಎಂಎಫ್‌ ಅಧ್ಯಕ್ಷ ಸ್ಥಾನದ ಚುನಾವಣೆ ಜುಲೈ 29ರಂದು ನಡೆಯಬೇಕಿತ್ತು. ಆದರೆ, ಅದೇ ದಿನ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಚುನಾವಣೆ ಮುಂದೂಡಿದ್ದರು. ಅದಕ್ಕೆ ಸಕಾರಣ ನೀಡಿರಲಿಲ್ಲ. ಒಮ್ಮೆ ವೇಳಾಪಟ್ಟಿ ಘೋಷಣೆಯಾದ ನಂತರ ಚುನಾವಣೆಯನ್ನು ಮುಂದೂಡಲು ಕಾನೂನಿನಲ್ಲಿ ಅವಕಾಶವಿಲ್ಲ. ಅಧ್ಯಕ್ಷ ಹುದ್ದೆಗೆ ನಾನೊಬ್ಬನೇ ನಾಮಪತ್ರ ಸಲ್ಲಿಸಿದ್ದೆ. ನಾನು ಅಧ್ಯಕ್ಷನಾಗುವುದನ್ನು ತಪ್ಪಿಸುವ ಉದ್ದೇಶದಿಂದ ಚುನಾವಣೆ ಮುಂದೂಡಲಾಗಿದೆ. ಆದ್ದರಿಂದ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯ ಆದೇಶ ರದ್ದುಪಡಿಸಬೇಕು. ಸ್ಥಗಿತಗೊಂಡಿದ್ದ ಹಂತದಿಂದಲೇ ಚುನಾವಣಾ ಪ್ರಕ್ರಿಯೆ ಮುಂದುವರಿಸಲು ಚುನಾವಣಾಧಿಕಾರಿಗೆ ನಿರ್ದೇಶಿಸಬೇಕು ಎಂದು ರೇವಣ್ಣ ಅರ್ಜಿಯಲ್ಲಿ ಕೋರಿದ್ದರು.

click me!