ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಮತ್ತೊಂದು ಹುದ್ದೆ..?

First Published Jul 9, 2018, 9:39 AM IST
Highlights

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ದಿನೇಶ್ ಗುಂಡೂರಾವ್ ಅವರು ಸಮ್ಮಿಶ್ರ ಸರ್ಕಾರದಲ್ಲಿ ಮತ್ತೊಂದು ಸ್ಥಾನವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. 

ಬೆಂಗಳೂರು :  ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ದಿನೇಶ್ ಗುಂಡೂರಾವ್ ಅವರು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿನಿಧಿಯಾಗಿ ನೂತನ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಥಾನ ಪಡೆಯಲಿದ್ದಾರೆ. ಅವರ ಸೇರ್ಪಡೆಯಿಂದ ಸಮಿತಿಯಲ್ಲಿ ಕಾಂಗ್ರೆಸ್ ಬಲ ಹೆಚ್ಚಾಗಲಿದೆ. 

ಇದನ್ನು ಸರಿತೂಗಿಸಲು ಜೆಡಿಎಸ್‌ನಿಂದಲೂ ಮತ್ತೊಬ್ಬ ಸದಸ್ಯರನ್ನು ನೇಮಕ ಮಾಡಿಕೊಳ್ಳಲು ಅವಕಾಶ ನೀಡುವ ಬಗ್ಗೆ ಚರ್ಚೆ ನಡೀತಿದೆ ಎಂದು ಮೂಲಗಳು ತಿಳಿಸಿವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚನೆ ವೇಳೆ ಕಾಂಗ್ರೆಸ್‌ನಿಂದ ಸಿದ್ದರಾಮಯ್ಯ ಹೊರತು ಪಡಿಸಿ ಕೆಪಿಸಿಸಿ ಅಧ್ಯಕ್ಷರೂ ಆಗಿದ್ದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣು ಗೋಪಾಲ್ ಹಾಗೂ ಜೆಡಿಎಸ್‌ನಿಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಡ್ಯಾನಿಶ್ ಅಲಿ ನೇಮಕಗೊಂಡಿದ್ದರು. 

ಇದೀಗ ಡಾ.ಜಿ. ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದು, ಉಪಮುಖ್ಯಮಂತ್ರಿ ಯಾಗಿ ಸಮಿತಿಯಲ್ಲಿ ಮುಂದುವರೆಯಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಪ್ರತಿನಿಧಿಯಾಗಿ ಕೆಪಿಸಿಸಿ ಅಧ್ಯಕ್ಷರಿಗೆ ಅವಕಾಶ ಕಲ್ಪಿಸಬೇಕಾಗಿರುವುದರಿಂದ ದಿನೇಶ್ ಗುಂಡೂರಾವ್ ಸ್ಥಾನ ಪಡೆಯಲಿದ್ದಾರೆ. ಸಮಿತಿಯಲ್ಲಿ ಉಂಟಾಗುವ ಅಸಮತೋಲನ ನಿವಾರಣೆ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

click me!