
ಬೆಂಗಳೂರು (ಅ. 14): ದಸರಾ ಹಬ್ಬದ ರಜೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಅ.17ರಿಂದ 22ರವರೆಗೆ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್ ರಾಜ್ಯದ ವಿವಿಧ ಸ್ಥಳಗಳಿಗೆ 2,500 ಹೆಚ್ಚುವರಿ ವಿಶೇಷ ಬಸ್‌ಗಳ ಸೌಲಭ್ಯ ಕಲ್ಪಿಸಿದೆ.
ಈ ಬಸ್‌ಗಳು ನಗರದ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣ ಹಾಗೂ ಶಾಂತಿನಗರದ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಿವೆ. ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಹಾಗೂ ಹೊರರಾಜ್ಯಗಳ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮದುರೈ, ಪಣಜಿ, ಶಿರಡಿ, ಪೂನಾ, ಎರ್ನಾಕುಲಂ, ಪಾಲ್ಗಾಟ್ ಸೇರಿದಂತೆ ವಿವಿಧ ಸ್ಥಳಗಳಿಗೆ ಈ ವಿಶೇಷ ಬಸ್‌ಗಳು ಕಾರ್ಯಾಚರಣೆಯಾಗಲಿವೆ. ರಾಜ್ಯ ಮತ್ತು ಅಂತರ್ ರಾಜ್ಯಗಳಿಂದ ಅ.20 ಮತ್ತು 21ರಂದು ಬೆಂಗಳೂರಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.
ದಸರಾ ಪ್ರಯುಕ್ತ 300 ಹೆಚ್ಚುವರಿ ಬಸ್:
ನಗರದ ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 150 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಮೈಸೂರು ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆಆರ್‌ಎಸ್ ಅಣೆಕಟ್ಟೆ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಮೊದಲಾದ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 150 ಬಸ್‌ಗಳು ಸೇರಿ ಒಟ್ಟು 300 ಹೆಚ್ಚುವರಿ ಬಸ್‌ಗಳನ್ನು ದಸರಾ ಪ್ರಯುಕ್ತ ನಿಯೋಜಿಸಲಾಗಿದೆ.
ನಿಗಮದ ವ್ಯಾಪ್ತಿಯ ಎಲ್ಲ ತಾಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ಹೆಚ್ಚುವರಿ ಬಸ್ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.