
ಬೆಂಗಳೂರು(ಸೆ.28): ಕಾಂಗ್ರೆಸ್ ಪಕ್ಷವು ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರಿಗೆ ಎಐಸಿಸಿ ಅಧ್ಯಕ್ಷ ಪಟ್ಟ ನೀಡಲು ಮುಂದಾಗಿದ್ದು, ಇದರ ಬೆನ್ನಲ್ಲೇ ಕರ್ನಾಟಕಕ್ಕೆ ರಾಷ್ಟ್ರೀಯ ಕಾಂಗ್ರೆಸ್'ನಲ್ಲಿ ಮಹತ್ವದ ಹುದ್ದೆಯೊಂದು ಲಭ್ಯವಾಗುವ ಸಾಧ್ಯತೆ ಕಂಡು ಬಂದಿದೆ. ಅದು- ರಾಜ್ಯದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಉಪಾಧ್ಯಕ್ಷ ಸ್ಥಾನ ದೊರೆಯುವ ಸಂಭವನೀಯತೆ.
ಇಂತಹದೊಂದು ಸಾಧ್ಯತೆ ಮೂಡಿರುವ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆ ನಡೆದಿದೆ. ಸಾಮಾನ್ಯವಾಗಿ ಎಐಸಿಸಿ ಉಪಾಧ್ಯಕ್ಷ ಎಂಬುದು ವಿಶೇಷ ಸಂದರ್ಭದಲ್ಲಿ ಮಾತ್ರ ಕಾಂಗ್ರೆಸ್ ಸೃಷ್ಟಿಸುವ ಹುದ್ದೆ. ರಾಹುಲ್ ಗಾಂಧಿ ಅವರಿಗಾಗಿ ಈ ಹುದ್ದೆಯನ್ನು ಸೃಷ್ಟಿಸಲಾಗಿತ್ತು. ಈಗ ರಾಹುಲ್ ಗಾಂಧಿ ಅವರೇ ಎಐಸಿಸಿ ಅಧ್ಯಕ್ಷರಾಗಲಿರುವ ಹಿನ್ನೆಲೆಯಲ್ಲಿ ಈ ಹುದ್ದೆಯೇ ನೇಪಥ್ಯಕ್ಕೆ ಸರಿಯುವ ಸಾಧ್ಯತೆಯಿತ್ತು. ಆದರೆ, ಬಿಜೆಪಿಯು ದಲಿತ ಮತಗಳ ಮೇಲೆ ಕಣ್ಣಿಟ್ಟು ಹಲವು ನಿರ್ಧಾರಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಹುದ್ದೆಯನ್ನು ಉಳಿಸಿಕೊಳ್ಳುವ ಚಿಂತನೆ ಕಾಂಗ್ರೆಸ್'ನಲ್ಲಿದೆ ಎಂದು ಉನ್ನತ ಮೂಲಗಳು ಹೇಳಿವೆ.
ಬಿಜೆಪಿಯು ರಾಮನಾಥ ಕೋವಿಂದ್ ಅವರಿಗೆ ರಾಷ್ಟ್ರಪತಿ ಹುದ್ದೆ ನೀಡಿದ ಬಳಿಕ ಕಾಂಗ್ರೆಸ್'ನಲ್ಲಿ ಇಂತಹ ಚಿಂತನೆ ಆರಂಭಗೊಂಡಿತ್ತು. ರಾಹುಲ್ ಗಾಂಧಿ ಅವರು ಅಧ್ಯಕ್ಷರಾದರೆ, ಆಗ ದಲಿತ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡುವ ಮೂಲಕ ದೇಶಾದ್ಯಂತ ದಲಿತ ಸಮುದಾಯಕ್ಕೆ ಸಂದೇಶ ರವಾನಿಸುವುದು ಉತ್ತಮ ಎಂಬುದೇ ಈ ಚಿಂತನೆ.
ಮೂಲಗಳ ಪ್ರಕಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯಾದರೆ, ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರುವುದು. ಅನಂತರ ಪ್ರಿಯಾಂಕಾ ಗಾಂಧಿ ಅವರಿಗೆ ಎಐಸಿಸಿ ಹಂತದ ಎಲ್ಲಾ ಮುಂಚೂಣಿ ಘಟಕಗಳ ಉಸ್ತುವಾರಿಯನ್ನು ನೀಡಲಾಗುವುದು. ಈ ಮೂಲಕ ಮುಂಬರುವ ಲೋಕಸಭೆ ಚುನಾವಣೆ ವೇಳೆಗೆ ಪ್ರಿಯಾಂಕ ಗಾಂಧಿ ಅವರನ್ನು ಸಕ್ರಿಯ ರಾಜಕಾರಣಕ್ಕೆ ತರುವ ಎಲ್ಲಾ ಪ್ರಯತ್ನ ಎಐಸಿಸಿ ಮಟ್ಟದಲ್ಲಿ ನಡೆದಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.