ಕರ್ನಾಟಕ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

By Web DeskFirst Published Sep 7, 2018, 8:06 AM IST
Highlights

ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕರ್ನಾಟಕ ಸರ್ಕಾರ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದೆ ಎನ್ನುವ ಅಸಮಾಧಾನವನ್ನು ಹೋಗಲಾಡಿಸಲು ಯತ್ನಿಸಿರುವ ಸರ್ಕಾರ ಇದೀಗ ಮತ್ತೆ ಮಹತ್ವದ ನಿರ್ಧಾರ ಕೈಗೊಂಡಿದೆ. ಕೆಲವು ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡಲು ನಿರ್ಧಾರ ಮಾಡಿದೆ. 

ಬೆಂಗಳೂರು: ಉತ್ತರ ಕರ್ನಾಟಕದ ಬೆಳಗಾವಿ ಯಿಂದ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನಾ ಕಚೇರಿ (ಕೆಶಿಪ್)ಯನ್ನು ಹಾಸನಕ್ಕೆ ಸ್ಥಳಾಂತರ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದ ಸಮ್ಮಿಶ್ರ ಸರ್ಕಾರವು, ಕೃಷ್ಣ ಭಾಗ್ಯ ಜಲ ನಿಗಮ, ಕರ್ನಾಟಕ ನೀರಾವರಿ ನಿಗಮ ಸೇರಿದಂತೆ ಹಲವು ಕಚೇರಿಗಳನ್ನು ಬೆಂಗಳೂರಿನಿಂದ ಉತ್ತರ ಕರ್ನಾಟಕ ಭಾಗಕ್ಕೆ ಸ್ಥಳಾಂತರಿಸುವ ಮೂಲಕ ಉತ್ತರ ಕರ್ನಾಟಕದ ಜನರನ್ನು ಸಮಾಧಾನಪಡಿಸಲು ಮುಂದಾಗಿದೆ. 

ಗುರುವಾರ ನಡೆದ ಸಂಪುಟ ಸಭೆ ಯಲ್ಲಿ ಕೃಷ್ಣ ಭಾಗ್ಯ ಜಲ ನಿಗಮ, ನೀರಾವರಿ ನಿಗಮ ಸೇರಿ ಹಲವು ಕಚೇರಿಗಳನ್ನು ಬೆಂಗಳೂರಿನಿಂದ ಉತ್ತರ ಕರ್ನಾಟಕ ಭಾಗಕ್ಕೆ ಸ್ಥಳಾಂತರಿಸಲು ತಾತ್ವಿಕ ಒಪ್ಪಿಗೆ ನೀಡಲಾಯಿತು.

ಜತೆಗೆ, ಸ್ಥಳಾಂತರಗೊಂಡ ಕಚೇರಿಗಳನ್ನು ಉತ್ತರ ಕರ್ನಾಟಕದ ಯಾವ ಸ್ಥಳದಲ್ಲಿ ಸ್ಥಾಪಿಸಬೇಕು ಹಾಗೂ ಇನ್ನೂ ಹೆಚ್ಚುವರಿ ಕಚೇರಿಗಳ ಸ್ಥಳಾಂತರ ಅಗತ್ಯವಿದೆಯೇ ಎಂಬ ಬಗ್ಗೆ ಶಿಫಾರಸು ಮಾಡಲು ಸಚಿವ ಸಂಪುಟ ಉಪ ಸಮಿತಿ ನೇಮಕ ಮಾಡಲು ತೀರ್ಮಾನಿಸಲಾಗಿದೆ. ಉಪ ಸಮಿತಿ ರಚನೆ ಅಧಿಕಾರವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ವಹಿಸಿ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ.

ಉತ್ತರ ಕರ್ನಾಟಕ ಭಾಗದ ಬೆಳಗಾವಿಯಿಂದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರುವ ಕೆಶಿಪ್ ಕಚೇರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ. ರೇವಣ್ಣ ಅವರ ಜಿಲ್ಲೆಯಾದ ಹಾಸನಕ್ಕೆ ವರ್ಗಾಯಿಸಲಾಗಿತ್ತು. ಇದರ ಜತೆಗೆ ಬಜೆಟ್‌ನಲ್ಲೂ ಉತ್ತರ ಕರ್ನಾಟಕದ ಭಾಗದ ಜನರನ್ನು ನಿರ್ಲಕ್ಷಿಸಿದ್ದರಿಂದ ಸಮ್ಮಿಶ್ರ ಸರ್ಕಾರದ ವಿರುದ್ಧ ಉತ್ತರ ಕರ್ನಾಟಕದ ಜನತೆ ಹೋರಾಟ ಕೈಗೆತ್ತಿಕೊಂಡಿದ್ದರು. ಅವರನ್ನು ಸಮಾಧಾನಪಡಿಸಲು ಸಭೆ ನಡೆಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಕೆಲವು ಕಚೇರಿಗಳನ್ನು ಉ-ಕ ಭಾಗಕ್ಕೆ ಸ್ಥಳಾಂತರಿಸುವ ಭರವಸೆ ನೀಡಿದ್ದರು. 

ಇದಕ್ಕಾಗಿ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ನೇತೃತ್ವದಲ್ಲಿ ರಚಿಸಿದ್ದ ಸಮಿತಿಯ ಶಿಫಾರಸು ಅನ್ವಯ, ಕೃಷ್ಣ ಭಾಗ್ಯ ಜಲ ನಿಗಮದ ಕೇಂದ್ರ ಹಾಗೂ ನೊಂದಾಯಿತ ಕಚೇರಿ, ಕರ್ನಾಟಕ ನೀರಾವರಿ ನಿಗಮ, ಸಕ್ಕರೆ ಅಭಿವೃದ್ಧಿ ನಿರ್ದೇಶನಾಲಯ ಹಾಗೂ ಕಬ್ಬು ಅಭಿವೃದ್ಧಿ ಆಯುಕ್ತರ ಕಚೇರಿ, ಕರ್ನಾಟಕ ವಿದ್ಯುತ್ ಕೈಮಗ್ಗ ನಿಗಮ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನಾಲ್ಕು ಸದಸ್ಯರ ಪೈಕಿ ಒಬ್ಬರನ್ನು ಉತ್ತರ ಕರ್ನಾಟಕಕ್ಕೆ ವರ್ಗಾಯಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. 

ಜತೆಗೆ, ಇಬ್ಬರು ಮಾಹಿತಿ ಆಯುಕ್ತರ ಹುದ್ದೆಗಳು, ಪ್ರಾಚ್ಯ ವಸ್ತು ಸಂಗ್ರಹಾಲಯ ನಿರ್ದೇಶನಾಲಯವನ್ನು ಉತ್ತರ ಕರ್ನಾಟಕಕ್ಕೆ ವರ್ಗಾಯಿಸಲಾಗುವುದು. ಕರ್ನಾಟಕ ನೀರು ಮತ್ತು ಒಳಚರಂಡಿ ಸರಬರಾಜು ಮಂಡಳಿಯನ್ನು ವಿಭಜಿಸಿ ಉತ್ತರ ಕರ್ನಾಟಕ ಭಾಗಕ್ಕೆ ನೀರು ಮತ್ತು ಒಳಚರಂಡಿ ಪೂರೈಸಲು ಉತ್ತರ-ಕರ್ನಾಟಕ ನೀರು ಮತ್ತು ಒಳಚರಂಡಿ ಸರಬರಾಜು ಮಂಡಳಿ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ. ಇದರಲ್ಲಿ ಬೆಳಗಾವಿಯ ಸುವರ್ಣಸೌಧಕ್ಕೆ ಕೆಲವು ಕಚೇರಿಗಳನ್ನು ಸ್ಥಳಾಂತರಿಸಲಾಗುವುದು ಎಂದು ಹೇಳಿದರು.

click me!