ಲಿಂಗಾಯತ ಧರ್ಮ ಅಲ್ಪಸಂಖ್ಯಾತ ಖಾತೆಗೆ

By Suvarna Web DeskFirst Published Apr 6, 2018, 8:26 AM IST
Highlights

ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವಾಲಯವು, ಮುಖ್ತಾರ್‌ ಅಬ್ಬಾಸ್‌ ನಖ್ವಿ ಸಚಿವರಾಗಿರುವ ಅಲ್ಪಸಂಖ್ಯಾತ ಸಚಿವಾಲಯಕ್ಕೆ ರವಾನಿಸಿದೆ.

ನವದೆಹಲಿ: ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವಾಲಯವು, ಮುಖ್ತಾರ್‌ ಅಬ್ಬಾಸ್‌ ನಖ್ವಿ ಸಚಿವರಾಗಿರುವ ಅಲ್ಪಸಂಖ್ಯಾತ ಸಚಿವಾಲಯಕ್ಕೆ ರವಾನಿಸಿದೆ. ಲಿಂಗಾಯತ ಮತ್ತು ವೀರಶೈವ ಲಿಂಗಾಯತ ಸಮುದಾಯಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವುದು ತಮ್ಮ ವ್ಯಾಪ್ತಿಯಲ್ಲಿಲ್ಲ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವಾಲಯ ಇದನ್ನು ನಿರ್ವಹಿಸಲಿದೆ ಎಂದು ಗೃಹ ಸಚಿವಾಲಯ ವಕ್ತಾರರೊಬ್ಬರು ತಿಳಿಸಿದ್ದಾರೆ.

ಜೊತೆಗೆ ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ತಕ್ಷಣಕ್ಕೆ ಯಾವುದೇ ನಿರ್ಧಾರ ಕೈಗೊಳ್ಳಲಾಗುವುದಿಲ್ಲ. ಸಮುದಾಯಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಕುರಿತ ಕರ್ನಾಟಕ ಸರ್ಕಾರದ ಪ್ರಸ್ತಾಪ ಸ್ವೀಕರಿಸಲ್ಪಟ್ಟಿದೆ. ಆದರೆ ಅದು ಗೃಹ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವುದಿಲ್ಲವಾದುದರಿಂದ, ಅದನ್ನು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ಹಸ್ತಾಂತರಿಸಲಾಗಿದೆ ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಸಚಿವಾಲಯಕ್ಕೆ ವರ್ಗಾವಣೆಗೂ ಮುನ್ನಾ ಪ್ರಸ್ತಾಪಕ್ಕೆ ಸಂಬಂಧಿಸಿ ಗೃಹ ಸಚಿವಾಲಯದಿಂದ ಏನಾದರೂ ಅಭಿಪ್ರಾಯ ನೀಡಲಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವಿಷಯ ಗೃಹ ಸಚಿವಾಲಯದಿಂದ ಪರಿಶೀಲಿಸಲ್ಪಡುವುದಿಲ್ಲವಾದುದರಿಂದ ಅಭಿಪ್ರಾಯ ನೀಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು ಹೇಳಿದ್ದಾರೆ. ಚುನಾವಣೆಗೂ ಮುನ್ನಾ ಕರ್ನಾಟಕದಲ್ಲಿ ಪ್ರಬಲ ಸಮುದಾಯವಾಗಿರುವ ಲಿಂಗಾಯತ ಸಮುದಾಯಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಪ್ರಸ್ತಾಪ ರವಾನಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ, ಕೇಂದ್ರದ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸಿದೆ.

click me!