
ನವದೆಹಲಿ(ಅ.26): ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿರೋಧ ಪಕ್ಷಗಳು ಸಿಬಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿವೆ.
ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ಇತರ ಪ್ರಮುಖ ವಿಪಕ್ಷ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನವದೆಹಲಿಯಲ್ಲಿರುವ ಸಿಬಿಐ ಮುಖ್ಯ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಕಾಲ ಕಳೆಯುತ್ತಿದ್ದಂತೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಲೋಧಿ ರಸ್ತೆಯಲ್ಲಿರುವ ದಯಾಳ್ ಸಿಂಗ್ ಕಾಲೇಜಿನಿಂದ ಸಿಬಿಐ ಮುಖ್ಯ ಕಚೇರಿವರೆಗೂ ಘೋಷಣೆ ಕೂಗಿತ್ತಾ ಪ್ರತಿಭಟನಾಕಾರರು ಹೆಜ್ಜೆ ಹಾಕಿದರು. ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ, ಅಶೋಕ್ ಗೆಹ್ಲೋಟ್, ಅಹ್ಮದ್ ಪಟೇಲ್, ಮೋತಿಲಾಲ್ ವೋರಾ, ವೀರಪ್ಪ ಮೊಯ್ಲಿ, ಆನಂದ್ ಶರ್ಮಾ ಸೇರಿದಂತೆ ಟಿಎಂಸಿ ಹಾಗೂ ಎಡಪಕ್ಷಗಳ ಪ್ರಮುಖ ನಾಯಕರು ಭಾಗಿಯಾಗಿದ್ದಾರೆ.
ಪ್ರತಿಭಟನೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಮಾತನಾಡಿ, ಸಿಬಿಐ ನಿರ್ದೇಶಕರನ್ನು ಬದಲಾವಣೆ ಮಾಡಿ ಸಂವಿಧಾನಕ್ಕೆ ಅಪಚಾರ ಎಸಗಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡಲೇ ದೇಶದ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆ ಹಿನ್ನಲೆಯಲ್ಲಿ ಸಿಬಿಐ ಕಚೇರಿ ಮುಂದೆ ಭದ್ರತೆಯನ್ನು ಹೆಚ್ಚಿಸಿ ಬ್ಯಾರಿಕೇಡ್ ಗಳನ್ನು ಹಾಕಲಾಗಿತ್ತು. ಪ್ರತಿಭಟನಾಕಾರರು ಬ್ಯಾರಿಕೇಡ್ ಗಳನ್ನು ಧ್ವಂಸಗೊಳಿಸಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.